ತುಮಕೂರು: ಪಾಲಿಕೆ ವ್ಯಾಪ್ತಿಯಲ್ಲಿ ಗುಂಡಿ ಬಿದ್ದು ಹಾಳಾಗಿರುವ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವ ಕಾರ್ಯ ಭರದಿಂದ ಸಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯ 1 ರಿಂದ 17ನೇ ವಾರ್ಡ್ ನವರೆಗೆ 27ಲಕ್ಷ ಹಾಗೂ 18 ರಿಂದ 35ನೇ ವಾರ್ಡ್ ವರೆಗೆ 24 ಲಕ್ಷ ರೂ.ಗಳ ವೆಚ್ಚದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆಗಳಾದ ಬಿ.ಎಚ್.ರಸ್ತೆ, ಕುಣಿಗಲ್ ರಸ್ತೆ, ಗುಬ್ಬಿ ರಸ್ತೆ, ಮಂಡಿಪೇಟೆ ಮುಖ್ಯರಸ್ತೆ, ಜೆ.ಸಿ.ರಸ್ತೆ, ಅಶೋಕ ರಸ್ತೆ, ರಾಧಾಕೃಷ್ಣ ರಸ್ತೆ, ಉಪ್ಪಾರಹಳ್ಳಿ ಮುಖ್ಯರಸ್ತೆ, ಇನ್ನಿತರೆ ಮುಖ್ಯ ರಸ್ತೆಗಳು ಹಾಗೂ ಅಡ್ಡರಸ್ತೆಗಳಲ್ಲಿ ಗುಂಡಿ ಬಿದ್ದು ಹಾಳಾಗಿದ್ದು, ವಾಹನ ಸಂಚಾರ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರು ದಾಖಲಾದ ಹಿನ್ನೆಲೆಯಲ್ಲಿ ಆಯುಕ್ತರು ಸ್ಥಳಪರಿಶೀಲನೆ ನಡೆಸಿ, ಅತಿ ತುರ್ತಾಗಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯನ್ನು ಕೈಗೊಳ್ಳಬೇಕೆಂದು ಪಾಲಿಕೆಯ ತಾಂತ್ರಿಕ ಶಾಖೆಗೆ ಸೂಚಿಸಿದ್ದಾರೆ.
ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಸಂಬಂಧಿಸಿದಂತೆ ಟೆಂಡರ್ ಆಹ್ವಾನಿಸಿ ಅರ್ಹ ಗುತ್ತಿಗೆದಾರರಿಗೆ ಟೆಂಡರ್ ನೀಡಲಾಗಿದ್ದು, 35 ವಾರ್ಡುಗಳಲ್ಲಿ 2 ಪ್ಯಾಕೇಜ್ ನಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಕಳೆದ 20 ದಿನಗಳಿಂದ ಕಾಮಗಾರಿ ನಡೆಯುತ್ತಿದ್ದು, ಶೇ.30ರಷ್ಟು ಕಾಮಗಾರಿ ಪೂರ್ಣಗೊಂಡಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 60 ಕಿ.ಮೀ.ಗಳಷ್ಟು ಉದ್ದದ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ನಿರ್ವಹಿಸಲು ಕೈಗೊಂಡಿದ್ದು, ಈವರೆಗೆ ಅಂದಾಜು 15 ಕಿ.ಮೀ.ಗಳಷ್ಟು ಉದ್ದವನ್ನು ಪೂರ್ಣಗೊಳಿಸಲಾಗಿದೆ. ಈ ಕಾಮಗಾರಿಯನ್ನು ಮುಂದಿನ 2 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಿಸಲಾಗುವುದು. ಮುಂದಿನ ದಿನಗಳಲ್ಲಿ ಅನುದಾನದ ಲಭ್ಯತೆ ಮೇರೆಗೆ ನಗರದ ಇನ್ನಿತರ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿಯನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕಾಮಗಾರಿ ಪ್ರಗತಿಯ ಬಗ್ಗೆ ಮಹಾನಗರ ಪಾಲಿಕೆಯ ಆಯುಕ್ತ ಬಿ.ವಿ.ಅಶ್ವಿಜ ಅವರು ಖುದ್ದಾಗಿ ಸೋಮವಾರ ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಯನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ನಿರ್ದೇಶಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4