ತುಮಕೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ನೇತೃತ್ವದಲ್ಲಿ ವಕೀಲರು ಗುರುವಾರ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ನೀಟ್ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ವಕೀಲರು ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಟಿ.ಎನ್. ಸುರೇಶ್, “ಪ್ರಶ್ನೆಪತ್ರಿಕೆ ಸೋರಿಕೆಯ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ರಾಷ್ಟ್ರಪತಿಗಳು ಸಂವಿಧಾನದ ಅನುಚ್ಛೇದ 75(2)ರ ಅಡಿಯಲ್ಲಿ ತಮ್ಮ ಅಧಿಕಾರ ಬಳಸಿ ಅವರನ್ನು ಕೇಂದ್ರ ಸಂಪುಟದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದರು.
ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಪ್ರಧಾನಿ ನಿವಾಸದೆದುರು ಧರಣಿ ನಡೆಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಟೀಕಿಸಿದರು. ಸಂವಿಧಾನ ನೀಡಿದ ಮೂಲಭೂತ ಹಕ್ಕು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕೇಂದ್ರ ಸರ್ಕಾರ ಬಲಪ್ರಯೋಗದ ಮೂಲಕ ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೂ. 1 ಕೋಟಿ ಪರಿಹಾರಕ್ಕೆ ಒತ್ತಾಯ:
ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಭವಿಷ್ಯದ ಆತಂಕಕ್ಕೆ ಒಳಗಾಗಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸರ್ಕಾರ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಸುರೇಶ್ ಒತ್ತಾಯಿಸಿದರು.
ಹಿರಿಯ ವಕೀಲ ವಿ.ಆರ್. ವೆಂಕಟೇಶಪ್ಪ ಮಾತನಾಡಿ, ನೀಟ್ ಹಗರಣದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಕನಸು ನುಚ್ಚುನೂರಾಗಿದೆ. ನ್ಯಾಯ ಕೇಳಿದವರ ಮೇಲೆ ಹಲ್ಲೆ ನಡೆಸಿರುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಪ್ರಸ್ತುತ ತನಿಖೆಯನ್ನು ಕೇಂದ್ರದ ಕಂಟ್ರೋಲ್‌ನಲ್ಲಿರುವ ಸಂಸ್ಥೆಗಳು ನಡೆಸುತ್ತಿರುವುದರಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್‌ನ ನೇರ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ನಂತರ ವಕೀಲರ ನಿಯೋಗವು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿತು. ಈ ವೇಳೆ ಹಿರಿಯ ವಕೀಲರಾದ ಹೆಚ್. ನಾಗರಾಜು, ಹೆಚ್.ಎಲ್. ವಸಂತಕುಮಾರ್, ಕೆ.ಸಿ. ವೆಂಕಟೇಶ್, ಮಲ್ಲಿಕಾರ್ಜುನ್, ಶಿವಣ್ಣ, ಕೆ.ಎನ್. ಹರೀಶ್, ಶಿವಕುಮಾರಸ್ವಾಮಿ, ಎನ್.ಆರ್. ರವಿ, ನವೀನ್ ನಾಯಕ್, ನಾಗರಾಜ್ ಪಾವಗಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


