ತುಮಕೂರು: ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ, ತ್ವರಿತವಾಗಿ ಹಾಗೂ ಪಾರದರ್ಶಕವಾಗಿ ಒದಗಿಸುವ ಉದ್ದೇಶದಿಂದ ಹೆಬ್ಬೂರು ಹೋಬಳಿಯ ನಾಡಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ನೂತನ ಅಟಲ್ಜಿ ಜನಸ್ನೇಹಿ ಕೇಂದ್ರದ ಕಟ್ಟಡವನ್ನು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಉದ್ಘಾಟಿಸಿದರು.
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ವಹಿಸಿದ್ದರು.
ಅಟಲ್ ಜಿ ಜನಸ್ನೇಹಿ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ವಿವಿಧ ಕಂದಾಯ ಸೇವೆಗಳು ಸೇರಿದಂತೆ ಸರ್ಕಾರದ ಹಲವು ನಾಗರಿಕ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರು ಸರ್ಕಾರಿ ಕೆಲಸಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವುದು ತಪ್ಪಲಿದ್ದು, ಸಮಯ ಮತ್ತು ಶ್ರಮ ಉಳಿತಾಯವಾಗಲಿದೆ. ಅಲ್ಲದೆ, ಸೇವಾ ವಿತರಣೆಯಲ್ಲಿ ಪಾರದರ್ಶಕತೆ ಹಾಗೂ ವೇಗ ಹೆಚ್ಚಿಸಲು ಈ ಕೇಂದ್ರ ಸಹಕಾರಿಯಾಗಲಿದೆ.
ಹೆಬ್ಬೂರು ಹೋಬಳಿಯ ಜನರಿಗೆ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸ್ಥಳೀಯವಾಗಿಯೇ ಪಡೆದುಕೊಳ್ಳಲು ನೂತನ ಕಟ್ಟಡ ಅನುಕೂಲ ಕಲ್ಪಿಸಲಿದೆ. ಆಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಕೇಂದ್ರವು ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತ ಸೇವೆಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ. ಜಯಚಂದ್ರ, ಶಾಸಕ ಬಿ. ಜ್ಯೋತಿ ಗಣೇಶ್, ಬಿಎಂಟಿಸಿ ಉಪಾಧ್ಯಕ್ಷ ನಿಖೇತ್ ರಾಜ್, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ ಬಿ.ವಿ., ಪೊಲೀಸ್ ವರಿಷ್ಠಾಧಿಕಾರಿ (ಪ್ರಭಾರ) ಗೋಪಾಲ್ ಸಿ., ತುಮಕೂರು ತಹಶೀಲ್ದಾರ್ ರಾಜೇಶ್ವರಿ ಪಿ.ಎಸ್. ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
