ಪಾವಗಡ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸಿಜೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ 33 ವರ್ಷದ ಬಾಣಂತಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹೆರಿಗೆಯ ಬಳಿಕ ತೀವ್ರ ನೋವು ಕಾಣಿಸಿಕೊಂಡರೂ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂಬುದು ಮೃತ ಮಹಿಳೆಯ ಕುಟುಂಬಸ್ಥರ ಆರೋಪವಾಗಿದ್ದು, ವೈದ್ಯಕೀಯ ನಿರ್ಲಕ್ಷ್ಯದ ಶಂಕೆ ವ್ಯಕ್ತವಾಗಿದೆ.
ತಾಲ್ಲೂಕಿನ ಅರಸೀಕೆರೆ ಗ್ರಾಮದ ಸುಧಾ (33) ಮೃತಪಟ್ಟ ಮಹಿಳೆ. ನವೆಂಬರ್ 17ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಸಿಜೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಅವರಿಗೆ ಹೆರಿಗೆ ಮಾಡಿಸಲಾಗಿತ್ತು. ಹೆಣ್ಣು ಮಗುವಿಗೆ ಜನ್ಮ ನೀಡಿದ ಅರ್ಧ ಗಂಟೆಯಲ್ಲೇ ಸುದಾ ಅವರಿಗೆ ತೀವ್ರ ಎದೆನೋವು ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ಈ ಕುರಿತು ವೈದ್ಯರಿಗೆ ಮಾಹಿತಿ ನೀಡಿದರೂ ನೋವು ಕಡಿಮೆಯಾಗಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾತ್ರಿ ಸುಮಾರು 12.30ರ ವೇಳೆಗೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಲಾಗಿತ್ತು. ಆದರೆ, ಮಾರ್ಗಮಧ್ಯೆ ಚಂದ್ರಬಾವಿ ಬಳಿ ರಾತ್ರಿ ಸುಮಾರು 1.30ರ ವೇಳೆಗೆ ಸುಧಾ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಹೆರಿಗೆಯ ನಂತರ ತೀವ್ರ ನೋವು ಕಾಣಿಸಿಕೊಂಡಾಗಲೂ ಸಮರ್ಪಕ ಚಿಕಿತ್ಸೆ ನೀಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕುಟುಂಬಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಣಂತಿಯ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಆಸ್ಪತ್ರೆಯ ಚಿಕಿತ್ಸಾ ದಾಖಲೆಗಳು, ವೈದ್ಯಕೀಯ ವರದಿಗಳು ಹಾಗೂ ಕರ್ತವ್ಯ ನಿರ್ವಹಣೆಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಮೃತ ಸುಧಾ ಅವರು ಪತಿ ಏಕಾಂತೇಶ್ವರ ಹಾಗೂ ಎಂಟು ವರ್ಷದ ಪುತ್ರಿ ಉನ್ನತಿಯನ್ನು ಅಗಲಿದ್ದಾರೆ. ಎರಡನೇ ಹೆರಿಗೆಯಲ್ಲಿ ಜನಿಸಿರುವ ನವಜಾತ ಹೆಣ್ಣು ಮಗು ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ.
ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಸೇವೆ ಹಾಗೂ ತುರ್ತು ಚಿಕಿತ್ಸಾ ವ್ಯವಸ್ಥೆಯ ಬಗ್ಗೆಯೂ ಸಾರ್ವಜನಿಕರು ಪ್ರಶ್ನೆ ಎತ್ತಿದ್ದಾರೆ. ತನಿಖೆಯಲ್ಲಿ ಕರ್ತವ್ಯ ಲೋಪ ಅಥವಾ ವೈದ್ಯಕೀಯ ನಿರ್ಲಕ್ಷ್ಯ ಸಾಬೀತಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣದ ಕುರಿತು ತನಿಖೆ ನಡೆಯಬೇಕಿದೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
