ಬೆಂಗಳೂರು: ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ಮಾಡಲು ಸಂಚು ರೂಪಿಸಿದ್ದ 6 ಜನ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
ಕಳೆದ ಜುಲೈನಲ್ಲಿ ಆರ್ ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿತ್ತು. ನಂತರ ಈ ಪ್ರಕರಣ ಎನ್ ಐಎಗೆ ವರ್ಗಾವಣೆಯಾಗಿತ್ತು.
ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಪತ್ತೆಯಾಗಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್ ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.


