ಬೆಂಗಳೂರು: ರಾಮಮಂದಿರ ಪ್ರತಿಷ್ಠಾಪನೆಗೊಳ್ಳುತ್ತಿರುವ ಈ ಪವಿತ್ರವಾದ ಅಯೋಧ್ಯೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಅಯೋಧ್ಯೆಯ ರಾಮ ಮಂದಿರದಲ್ಲಿ ಇಂದು ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಕುಮಾರಸ್ವಾಮಿ ವಿಮಾನದಲ್ಲಿ ಅಯೋಧ್ಯೆಗೆ ತೆರಳಿದರು.
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಆಹ್ವಾನಿತರಲ್ಲಿ ನಿಖಿಲ್ ಕುಮಾರಸ್ವಾಮಿ ಕೂಡ ಒಬ್ಬರಾಗಿದ್ದಾರೆ. ಜನವರಿ (22) ಆದ ಇಂದು ನಟ ನಿಖಿಲ್ ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದೆ. ಶ್ರೀರಾಮ ಜನ್ಮ ಭೂಮಿಯಲ್ಲಿಯೇ ನಿಖಿಲ್ ಕುಮಾರಸ್ವಾಮಿ ಅವರು ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ಪುಣ್ಯಭೂಮಿ ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸಿಕೊಂಡಿದ್ದು, ನನ್ನ ಪುಣ್ಯ ಎಂದು ಹೇಳಿದ್ದಾರೆ.