ತುಮಕೂರು: ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನ. 16ರಂದು ನಡೆಯುವ ಸಮಾವೇಶದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಅಬ್ದುಲ್ ಜಬ್ಬಾರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಮುದಾಫೀರ್ ಅಹಮದ್ ಖಾನ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಅವರು, ಅರಮನೆ ಮೈದಾನದ ನಲಪಾಡ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಎಐಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪಗಡಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖಂಡರಾದ ಮಲ್ಲಿಕಾರ್ಜುನ್ ಖರ್ಗೆ, ಡಾ.ಜಿ. ಪರಮೇಶ್ವರ ಸೇರಿದಂತೆ ಎಲ್ಲಾ ಮುಖಂಡರು, ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ, ಅವಕಾಶಗಳು, ಅಧಿಕಾರ ದೊರೆತಿದ್ದರೆ ಅದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ಇದಕ್ಕೆ ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಜನರು ನೀಡಿದ ಮತಗಳೇ ಸಾಕ್ಷಿ ಎಂದರು.
ಸಿ.ಎಂ. ಇಬ್ರಾಹಿಂ ಯಾವ ಉದ್ದೇಶಕ್ಕೆ ಕಾಂಗ್ರೆಸ್ ವಿರುದ್ಧ ಮಾತನಾಡುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಎಲ್ಲಾ ಸಂದರ್ಭಗಳಲ್ಲೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತರೆ, ಅವರ ಕೋರಿಕೆ ಈಡೇರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಡಾ.ಮೆಹಮೂದ್, ಇಕ್ಬಾಲ್ ಅಹಮದ್, ಮುಜೀಬ್, ಖಲೀಂ ಅಹಮದ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700