ಔರಾದ್: ಗ್ರಾಮೀಣ ಪ್ರದೇಶದ ಜನರು ತಮ್ಮ ಗ್ರಾಮಠಾಣಾ ವ್ಯಾಪ್ತಿಯಲ್ಲಿರುವ ಮನೆ, ನಿವೇಶನಗಳಿಗೆ ಭೂ ಗ್ಯಾರಂಟಿ ಯೋಜನೆಯಡಿ ಇ–ಸ್ವತ್ತು ಮಾಡಿಸಿಕೊಳ್ಳುವ ಮೂಲಕ ಆಸ್ತಿಗೆ ಅಧಿಕೃತ ದಾಖಲೆ ಪಡೆಯಬಹುದು ಎಂದು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಹೇಳಿದರು.
ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಭೂ ಗ್ಯಾರಂಟಿ ಯೋಜನೆಯಡಿ ಹಮ್ಮಿಕೊಂಡಿದ್ದ ಇ–ಸ್ವತ್ತು ಖಾತಾ ವಿತರಣಾ ಅಭಿಯಾನದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರಿಗೆ ತಮ್ಮ ಆಸ್ತಿಗಳ ಮಾಲೀಕತ್ವದ ದಾಖಲೆ ಒದಗಿಸುವ ಉದ್ದೇಶದಿಂದ ಸರ್ಕಾರ ಭೂ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದು, ಗ್ರಾಮಠಾಣಾ ವ್ಯಾಪ್ತಿಯಲ್ಲಿರುವ ಮನೆ, ನಿವೇಶನ ಹಾಗೂ ಇತರೆ ಅರ್ಹ ಆಸ್ತಿಗಳಿಗೆ ನಿಯಮಾನುಸಾರ ಇ–ಸ್ವತ್ತು ಖಾತಾ ಮಾಡಿಸಿಕೊಳ್ಳಲು ಅವಕಾಶವಿದೆ. ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇ–ಸ್ವತ್ತು ದಾಖಲೆ ಹೊಂದುವುದರಿಂದ ಆಸ್ತಿಯ ಮಾಲೀಕತ್ವಕ್ಕೆ ಅಧಿಕೃತ ದಾಖಲಾತಿ ದೊರೆಯಲಿದ್ದು, ಮುಂದಿನ ದಿನಗಳಲ್ಲಿ ಆಸ್ತಿ ಸಂಬಂಧಿತ ವಿವಿಧ ಸರ್ಕಾರಿ ಹಾಗೂ ಕಾನೂನು ಪ್ರಕ್ರಿಯೆಗಳಿಗೆ ಅನುಕೂಲವಾಗಲಿದೆ. ಆದ್ದರಿಂದ ಅರ್ಹ ಆಸ್ತಿ ಹೊಂದಿರುವವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಇ-ಸ್ವತ್ತು ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಹೇಳಿದರು.
ಇದೇ ವೇಳೆ ತಾಲೂಕು ಪಂಚ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಉಪ್ಪೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಂದಕುಮಾರ ಶಾಸ್ತ್ರಿ, ಗ್ರಾಮ ಪಂಚಾಯತಿ ಸಿಬ್ಬಂದಿಯವರು ಹಾಗೂ ಸಾರ್ವಜನಿಕರು ಹಾಜರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
