ಕೊರಟಗೆರೆ: ಪಟ್ಟಣದ ಮಯೂರ ಬೇಕರಿಯಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳ ಮಾರಾಟ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ತಹಶೀಲ್ದಾರ್ ಮಂಜುನಾಥ್ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಉಮೇಶ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ಬೇಕರಿ ಒಳಗೆ ಗೃಹ ಬಳಕೆ ಸಿಲಿಂಡರ್ ಬಳಸುತ್ತಿರುವುದು ಪತ್ತೆಯಾಗಿದ್ದು, ಅವಧಿ ನಮೂದಿಸದ ಚಾಕಲೇಟ್ ಗಳು ಹಾಗೂ ವಿವಿಧ ರೀತಿಯ ಫುಡ್ ಕಲರ್ ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೇಕ್ ಹಾಗೂ ಇತರೆ ತಿನಿಸುಗಳಲ್ಲಿ ಮಿತಿಮೀರಿದ ಆಹಾರ ಬಣ್ಣ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿ ಬಂದಿದೆ.
ಈ ಹಿಂದೆಯೂ ಹಳಸಿದ ಆಹಾರ ಪದಾರ್ಥಗಳನ್ನು ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಕುರಿತು ಸ್ಥಳೀಯ ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗಿದ್ದವು. ಆ ವೇಳೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ನೋಟಿಸ್ ಜಾರಿ ಮಾಡಿ ಎಚ್ಚರಿಕೆ ನೀಡಿದ್ದರು. ಆದರೂ ಪದೇ ಪದೇ ನಿಯಮ ಉಲ್ಲಂಘನೆ ಮಾಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಮಯೂರ ಬೇಕರಿಗೆ ಮೂರನೇ ನೋಟಿಸ್ ಜಾರಿ ಮಾಡಿ ₹5,000 ದಂಡ ವಿಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿಯ ಅಕ್ರಮಗಳು ಮರುಕಳಿಸಿದರೆ ಬೇಕರಿಯನ್ನು ಸೀಸ್ ಮಾಡುವುದಾಗಿ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಗ್ರಾಹಕರ ಆರೋಗ್ಯದೊಂದಿಗೆ ಆಟವಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


