ಚಿಕ್ಕನಾಯಕನಹಳ್ಳಿ : ಪ್ರಜಾಸೇವಾ ಅಭಿಯಾನದಲ್ಲಿ ಸಾರ್ವಜನಿಕರು ಸಲ್ಲಿಸುವ ಸಮಸ್ಯೆಗಳ ಅರ್ಜಿಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಜವಾಬ್ದಾರಿಯಿಂದ ಸ್ಪಂದಿಸಬೇಕು. ಅರ್ಜಿಗಳ ಮೇಲೆ ಕೈಗೊಂಡ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕಿನ ಹಂದನಕೆರೆ ಹೋಬಳಿಯ ಮತಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸೀಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಈ ಅಭಿಯಾನದಲ್ಲಿ ಭಾಗವಹಿಸಲಾಗಿದೆ. ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರೆ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಪ್ರದೇಶಗಳ ವಾಸ್ತವ ಸ್ಥಿತಿಗತಿಗಳನ್ನು ಅರಿಯಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು.
ಈ ಬಾರಿಯ ಚುನಾವಣೆಯ ನಂತರ ಮತಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 7.33 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗ್ರಾಮದ ರಸ್ತೆಗೆ ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿದ್ದು, ಇದರಿಂದ ಈ ಭಾಗದ ಜನರಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸಿದಂತಾಗಿದೆ ಎಂದು ತಿಳಿಸಿದರು.
ಈ ಭಾಗದ ಸಾರ್ವಜನಿಕರು ನಿವೇಶನಕ್ಕಾಗಿ ಮನವಿ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಠಾಣಾ ಜಾಗವನ್ನು ಗುರುತಿಸಬೇಕು. ಸರ್ಕಾರಿ ಖಾಲಿ ಜಾಗ ಲಭ್ಯವಿದ್ದಲ್ಲಿ ಅದನ್ನು ಪರಿಶೀಲಿಸಿ ನಿವೇಶನ ರಹಿತರಿಗೆ ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗ್ರೇಡ್-2 ತಹಸೀಲ್ದಾರ್ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರದ ಅನೇಕ ಯೋಜನೆಗಳು ಇನ್ನೂ ಅರ್ಹ ಫಲಾನುಭವಿಗಳಿಗೆ ತಲುಪಿಲ್ಲ. ಅಂತಹ ಯೋಜನೆಗಳನ್ನು ಜನರಿಗೆ ತಲುಪಿಸುವುದು ಹಾಗೂ ವಿವಿಧ ಇಲಾಖೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಪರಿಹರಿಸುವುದು ಪ್ರಜಾಸೇವಾ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಸರ್ಕಾರವೆಂದರೆ ಕೇವಲ ಕಚೇರಿಯ ಕಟ್ಟಡಕ್ಕೆ ಸೀಮಿತವಲ್ಲ, ಅದು ಜನರ ನಡುವೆ ಇರಬೇಕು ಎಂಬುದನ್ನು ಈ ಕಾರ್ಯಕ್ರಮ ಸಾರುತ್ತಿದೆ. ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುತ್ತಿರುವ ಎರಡನೇ ಕಾರ್ಯಕ್ರಮ ಇದಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದರು.
ಮತಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸೀಹಳ್ಳಿ, ಮಾದಾಪುರ, ಚಟ್ಟಸಂದ್ರ, ಯಳ್ಳೇನಹಳ್ಳಿ, ಬೇಳಗಿಹಳ್ಳಿ, ಗಾಂಧಿನಗರ ಹಾಗೂ ಮತಿಘಟ್ಟ ಗ್ರಾಮಗಳಲ್ಲಿ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ಜಿಲ್ಲಾ ದಿಶಾ ಸಮಿತಿ ಸದಸ್ಯ ರಾಮಚಂದ್ರಯ್ಯ, ಬಿಇಒ ಕಾಂತರಾಜು, ಕೃಷಿ ಸಹಾಯಕ ನಿರ್ದೇಶಕ ಶಿವರಾಜ್ಕುಮಾರ್, ಬೆಸ್ಕಾಂ ಎಇಇ ಗವಿರಂಗಯ್ಯ, ಸಿಡಿಪಿಒ ಹೊನ್ನಪ್ಪ, ಎಇಇ ಮೋಹನ್, ಎಡಿಎಲ್ಆರ್ ಜಗದೀಶ್, ಉಪತಹಸೀಲ್ದಾರ್ ಯಶ್ವಂತ್, ಸ್ಥಳೀಯ ಮುಖಂಡರಾದ ರಾಜಣ್ಣ, ಉಮೇಶ್, ದೇವರಾಜು, ಚನ್ನವೀರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
