ತುಮಕೂರು: ಸಾರ್ವಜನಿಕರಿಗೆ ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವುದು ಅವರನ್ನು ಸ್ವಾವಲಂಬಿಗಳನ್ನಾಗಿಸುವುದು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಮುಖ ಸಂಕಲ್ಪವಾಗಿದೆ ಎಂದು ಪಾವಗಡ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ಎಸ್. ಪಾಪಣ್ಣ ತಿಳಿಸಿದರು.
ಪಾವಗಡ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಇಲಾಖಾವಾರು ಮಾಹಿತಿ ಪಡೆದ ಅವರು, ಪಾವಗಡ ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯದವರನ್ನು ಪತ್ತೆ ಹಚ್ಚಿ ಅವರ ಖಾತೆಗೆ 2,000 ರೂ. ಹಣವನ್ನು ತಲುಪಿಸಬೇಕೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಖೀಬ್ ಅವರಿಗೆ ಖಡಕ್ ಸೂಚನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಯಾಕೆ ಬರುತ್ತಿಲ್ಲ ಎನ್ನುವುದರ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅವರು ಸೂಚಿಸಿದರು.
ಪಾವಗಡ ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲೂ ಸಹ ಅನ್ನಭಾಗ್ಯ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಮಧ್ಯವರ್ತಿಗಳ ಮತ್ತು ಕಮಿಷನ್ ದಂಧೆಗೆ ಕಡಿವಾಣ ಹಾಕುವುದರ ಜೊತೆಗೆ ಸಮಯಕ್ಕೆ ಸರಿಯಾಗಿ ಪಡಿತರ ವಿತರಣೆಗೆ ಸೂಚಿಸಿದರು.
ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದ ಅವರು ಗ್ರಾಮೀಣ ಭಾಗದಿಂದ ನಗರ ಪ್ರದೇಶಗಳಿಗೆ ವಿದ್ಯಾರ್ಥಿಗಳು, ಮಹಿಳೆಯರು ಸಂಚರಿಸಲು ಗ್ರಾಮಾಂತರ ಸಾರಿಗೆ ವ್ಯವಸ್ಥೆ ಇಲ್ಲ. ತಾಲೂಕಿನ ಗುಮ್ಮಘಟ್ಟ, ಆರ್.ಡಿ. ರೊಪ್ಪ, ಬೂದಿಬೆಟ್ಟ, ಸಿಂಗರೆಡ್ಡಿಹಳ್ಳಿ ಸೇರಿದಂತೆ ವಿವಿಧಡೆ ಬಸ್ ವ್ಯವಸ್ಥೆ ಮಾಡಬೇಕೆಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು ವಿದ್ಯುತ್ ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳಿ ಮತ್ತು ಗ್ರಾಮೀಣ ಭಾಗದಲ್ಲಿ ಕೆಲವೆಡೆ ಸಿಬ್ಬಂದಿ ಹಣ ಪಡೆದು ಮೀಟರ್ ಅಳವಡಿಸುವುದಾಗಿ ವಂಚಿಸಿರುವುದು ಬೆಳಕಿಗೆ ಬಂದಿದೆ ಇದಕ್ಕೆ ಕಡಿವಾಣ ಹಾಕಬೇಕೆಂದರು.
ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಅವರಿಂದ ಮಾಹಿತಿ ಪಡೆದ ಅವರು ಯೋಜನೆಯ ಬಗ್ಗೆ ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿಗಳಿಗೆ ಅರಿವು ಮೂಡಿಸಬೇಕು. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ನಿಯಮಾನುಸಾರವಾಗಿ ಹಣ ಪಾವತಿಯಾಗುವಂತೆ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಗುಮ್ಮಘಟ್ಟ ಶ್ರೀನಿವಾಸುಲು, ರಂಗೇಗೌಡ, ವೀರಾಂಜನೇಯ, ಉಮೇಶ್, ಶಂಸುದ್ದೀನ್, ಸುಮ ಅನಿಲ್, ಲಕ್ಷ್ಮಿ ರವಿ, ಎಚ್. ಶ್ರೀರಾಮುಲು, ದಿವಾಕರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿರಾಮ್, ಆಹಾರ ಶಿರಸ್ತೆದಾರ್ ಶಶಿಕಲಾ, ಬೆಸ್ಕಾಂ ಎಇಇ ಕೃಷ್ಣಮೂರ್ತಿ, ಸೇರಿದಂತೆ ಹಲವರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW