ಬೆಳಗಾವಿ : ಇತ್ತೀಚಿನ ಅತಿವೃಷ್ಟಿಯಿಂದ ಬೆಳೆಹಾನಿಯಾಗಿರುವ ಕುರಿತು ಜಂಟಿ ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ಪರಿಹಾರ ಪೊರ್ಟಲ್ ನಲ್ಲಿ ಅಪ್ ಲೋಡ್ ಮಾಡಿ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆಯ ಸಚಿವರಾದ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸುವರ್ಣ ವಿಧಾನಸೌಧದಲ್ಲಿ ಶನಿವಾರ(ಸೆ.3) ನಡೆದ ಕೃಷಿ ಇಲಾಖೆಯ ಬೆಳಗಾವಿ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಿಬ್ಬಂದಿ ಕೊರತೆ ಮತ್ತಿತರ ನೆಪ ಹೇಳಿ ಬೆಳೆಹಾನಿ ಪರಿಹಾರ ನೀಡುವ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಈಗಾಗಲೇ ನಿರ್ದೇಶನ ನೀಡಿರುವಂತೆ ಎಲ್ಲ ಜಿಲ್ಲೆಗಳಲ್ಲಿ ಹೆಸರು, ಉದ್ದು ಖರೀದಿ ಕೇಂದ್ರಗಳನ್ನು ಆರಂಭಿಸಿ ರೈತರ ನೋಂದಣ ಜತೆ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಿದರು.
ರೈತರ ಮೂಲಕ ಬೆಳೆ ಸಮೀಕ್ಷೆಗೆ ನಡೆಸಲು ಸೂಚನೆ:
ಇಲಾಖೆ ಅಭಿವೃದ್ಧಿಪಡಿಸಿರುವ ಆಪ್ ಮೂಲಕ ರೈತರೇ ಸ್ವತಃ ಬೆಳೆಸಮೀಕ್ಷೆ ಮಾಡಲು ಪ್ರೋತ್ಸಾಹ ನೀಡಬೇಕು. ಇದಕ್ಕಾಗಿ ಸೂಕ್ತ ಪ್ರಚಾರ ಕಾರ್ಯ ಕೈಗೊಳ್ಳಬೇಕು ಎಂದು ಸಚಿವ ಪಾಟೀಲ ತಿಳಿಸಿದರು.
ಬೆಳೆವಿಮೆ ಪರಿಹಾರ ಕ್ಲೇಮು ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು. ವಿಮೆ ಕಂಪನಿಯ ಜತೆ ನಿರಂತರ ಸಂಪರ್ಕ ಇಟ್ಟುಕೊಳ್ಳಬೇಕು. ರೈತರ ಆಧಾರ ನೋಂದಣ ಸೇರಿದಂತೆ ಎಲ್ಲ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಪರಿಹಾರವನ್ನು ಒದಗಿಸಬೇಕು. ಬೆಳೆಹಾನಿ ಸಂಭವಿಸಿದ ಪ್ರದೇಶಗಳಲ್ಲಿ ಪ್ರತಿ ರೈತನಿಗೂ ಸೂಕ್ತ ಪರಿಹಾರ ದೊರಕಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.
ಪಿಎಂ-ಕಿಸಾನ್ ಯೋಜನೆಯಡಿ ರೈತರ ಇ-ಕೆವೈಸಿ ಜೋಡಣೆಗೆ ಎಲ್ಲ ಅಧಿಕಾರಿಗಳು ಪ್ರಯತ್ನಿಸಬೇಕು. ಸೆ.7 ಕೊನೆಯ ದಿನವಾಗಿರುವುದರಿಂದ ಬಾಕಿ ಉಳಿದ ರೈತರ ಇ-ಕೆವೈಸಿ ಮಾಡಬೇಕು ಎಂದು ತಿಳಿಸಿದರು.
ಇ-ಕೆವೈಸಿ ಜೋಡಣೆಯಲ್ಲಿ ಬೆಳಗಾವಿ ಜಿಲ್ಲೆ ಅತ್ಯುತ್ತಮ ಸಾಧನೆ ಮಾಡಿದೆ. ಇದನ್ನೇ ಮಾದರಿಯಾಗಿಟ್ಟುಕೊಂಡು ಉಳಿದ ಜಿಲ್ಲೆಯವರು ಕೆವೈಸಿ ಮಾಡಿಸಬೇಕು.ಇದಕ್ಕೆ ಸಂಬಂಧಿಸಿದಂತೆ ಹೆಚ್ಚು ಹೆಚ್ಚು ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.
ನಿರೀಕ್ಷಿತ ಪ್ರಗತಿ ಸಾಧಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಸಿ.ಪಾಟೀಲ ಎಚ್ಚರಿಕೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz