ಪಾವಗಡ: ಕಬ್ಬು ಬೆಳೆಗಾರರು ಬೆಳೆದ ಬೆಳೆಗೆ ಪ್ರತಿ ಟನ್ಗೆ ₹5,500 ಬೆಲೆ ನಿಗದಿಪಡಿಸಬೇಕು ಹಾಗೂ ರೈತರ ವಿವಿಧ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ರೈತರು ಕೆಲಕಾಲ ರಸ್ತೆ ತಡೆ ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಪೂಜಾರಪ್ಪ, ಕಬ್ಬು ಬೆಳೆಗಾರರಿಗೆ ಸಮರ್ಪಕ ಬೆಲೆ ನಿಗದಿಪಡಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದೆಡೆ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಕಬ್ಬಿನ ಬೆಳೆ ನಾಶವಾಗುತ್ತಿರುವುದರಿಂದ ರೈತರ ಬದುಕು ಮತ್ತಷ್ಟು ದುಸ್ತರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಹಾವೇರಿ ಹಾಗೂ ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೇವಲ ಭರವಸೆ ನೀಡದೆ, ಕೂಡಲೇ ಕಬ್ಬಿಗೆ ಎಸ್ಎಪಿ (ರಾಜ್ಯ ಸಲಹಾ ಬೆಲೆ) ಘೋಷಿಸಬೇಕು. ಸಕ್ಕರೆಯ ಕನಿಷ್ಠ ಮಾರಾಟ ದರ ಹೆಚ್ಚಿಸಬೇಕು. ಕಬ್ಬಿನ ತೂಕ ಮತ್ತು ಸಕ್ಕರೆ ಇಳುವರಿ ಲೆಕ್ಕಾಚಾರದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು. ಬಾಕಿ ಹಣವನ್ನು ತಕ್ಷಣ ಪಾವತಿಸಬೇಕು ಎಂದು ಒತ್ತಾಯಿಸಿದರು.
ಇದರೊಂದಿಗೆ ರೈತರಿಗೆ ಸಮರ್ಪಕ ಕುಡಿಯುವ ನೀರು ಒದಗಿಸಬೇಕು. ಹಗಲಿನ ವೇಳೆಯಲ್ಲಿ ಕನಿಷ್ಠ 10 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಸಬೇಕು. ರೈತರ ಸಾಲ ವಸೂಲಾತಿಗೆ ಬ್ಯಾಂಕುಗಳು ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ತಾಲೂಕು ಕಚೇರಿಯ ಮುಖ್ಯ ದ್ವಾರವನ್ನು ಮುಚ್ಚಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಕ್ರಮಗಳಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡೆ ಗುಲ್ಜಾರ್ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೂಡಲೇ ಎಚ್ಚೆತ್ತುಕೊಂಡು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಅಗತ್ಯ ಮೂಲಸೌಕರ್ಯ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ.ತಾಲೂಕು ರೈತ ಸಂಘದ ಅಧ್ಯಕ್ಷ ಶಿವು, ಟಿ.ಎನ್. ಬೆಟ್ಟದ ಕೃಷ್ಣಮೂರ್ತಿ, ದುರುಗಪ್ಪ, ನಾರಾಯಣ ನಾಯ್ಕ, ಗೋಪಾಲ್, ಶಂಕರಪ್ಪ, ಎಚ್. ಮರ್ಜನ್, ದೇವನಾಥಪ್ಪ, ರಾಜಣ್ಣ, ಸಿದ್ದಪ್ಪ, ನಡುಪನ್ನ, ಗುಡುಪಲ್ಲಪ್ಪ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
