ಚಿಕ್ಕನಾಯಕನಹಳ್ಳಿ : ಸಮಾಜದಲ್ಲಿ ವಿಶೇಷ ಚೇತನರನ್ನು ಎಲ್ಲರಂತೆ ಗೌರವದಿಂದ ಕಾಣಬೇಕು. ಅವರ ಅಗತ್ಯಗಳಿಗೆ ಸ್ಪಂದಿಸುವುದರ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಅವರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ತಿಳಿಸಿದರು.
ಪಟ್ಟಣದ ತೀ.ನಂ.ಶ್ರೀ ಭವನದ ಮುಂಭಾಗದಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಅವರು, ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಟ್ರೈಸಿಕಲ್, ವಾಕರ್ ಸೇರಿದಂತೆ ವಿವಿಧ ಅಗತ್ಯ ಸಲಕರಣೆಗಳನ್ನು ಸರ್ಕಾರದ ವತಿಯಿಂದ ನೇರವಾಗಿ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಣದಲ್ಲಿ ಪ್ರಗತಿ ಸಾಧಿಸುವುದರೊಂದಿಗೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.
ವಿಶೇಷ ಚೇತನ ಮಕ್ಕಳನ್ನು ಆರೈಕೆ ಮಾಡುವ ಪೋಷಕರ ಜವಾಬ್ದಾರಿ ಹೆಚ್ಚಿನದಾಗಿದ್ದು, ಅಂತಹ ಕುಟುಂಬಗಳಿಗೂ ಸರ್ಕಾರದಿಂದ ಅಗತ್ಯ ನೆರವು ಮತ್ತು ಸಹಕಾರ ದೊರೆಯಬೇಕು. ವಿಶೇಷ ಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್. ಮಾತನಾಡಿ, ತಾಲ್ಲೂಕಿನ ಪ್ರಾಥಮಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 84 ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಹಾಗೂ ಪ್ರೌಢಶಾಲೆಗಳ 51 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಅಗತ್ಯ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
