ಔರಾದ್: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಸ್ವಚ್ಛ ಹಾಗೂ ಸುಸ್ಥಿರ ಸಮಾಜ ನಿರ್ಮಾಣಕ್ಕಾಗಿ ಏಕಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ತ್ಯಜಿಸುವುದು ಅತ್ಯಗತ್ಯ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಕಿರಣ ಪಾಟೀಲ್ ಕರೆ ನೀಡಿದರು.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೊಕ್ರಾಣಾ ಗ್ರಾಮದಲ್ಲಿ ತಾಲೂಕು ಪಂಚಾಯತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ”ದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಹಾಗೂ ಸಮಸ್ತ ಜೀವಜಾಲದ ಮೇಲೆ ಉಂಟಾಗುತ್ತಿರುವ ಗಂಭೀರ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದೇ ಈ ವಿಶೇಷ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ನಾಗರಿಕರು ಪ್ಲಾಸ್ಟಿಕ್ ಬಳಕೆಯನ್ನು ಬಿಟ್ಟು, ಪರಿಸರ ಸ್ನೇಹಿ ಪರ್ಯಾಯ ವಸ್ತುಗಳ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಛ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಾರ್ವಜನಿಕರು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಾಥಾದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ತ್ಯಜಿಸುವ ಕುರಿತು ಜಾಗೃತಿ ಮೂಡಿಸುವ ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.
ಈ ಸಂದರ್ಭದಲ್ಲಿ ಹೊಕ್ರಾಣಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕೃಷ್ಣಪ್ಪ, ಬೊಂತಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಮೇಶ್, ತಾಲೂಕು ಪಂಚಾಯತ್ ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


