ಬೆಂಗಳೂರು: ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮುಂದಿನ ಫೆಬ್ರವರಿ ವೇಳೆಗೆ ತಯಾರಿ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮತದಾರರ ಪಟ್ಟಿ ಕೂಡ ಸಿದ್ಧಗೊಳ್ಳುತ್ತಿದೆ. ಚುನಾವಣೆಯನ್ನಂತು ನಿಲ್ಲಿಸಲು ಸಾಧ್ಯವಿಲ್ಲ. ಫೆಬ್ರವರಿಯಲ್ಲಿ ಮತದಾನದ ಸಾಧ್ಯತೆ ಇದೆ ಎಂದರು.
ಸಚಿವ ಸಂಪುಟ ಪುನರ್ ರಚನೆ ಚರ್ಚೆಯೇ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಸಂಪುಟದಲ್ಲಿ ಒಂದು ಸ್ಥಾನ ಮಾತ್ರ ಖಾಲಿ ಇದೆ. ಬೆಳಗಾವಿಯ ಅಧಿವೇಶನದ ಬಳಿಕ ಅದನ್ನು ಭರ್ತಿ ಮಾಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ.ಸಂಪುಟ ಪುನರ್ ರಚನೆಯಂತೂ ಸದ್ಯಕ್ಕಿಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರದ ಸಚಿವರ ಕಾರ್ಯವೈಖರಿ ನಡವಳಿಕೆಗಳ ಮೇಲೆ ನಿಗಾ ವಹಿಸಲು ಹೈಕಮಾಂಡ್ ತನ್ನದೇ ಆದ ವ್ಯವಸ್ಥೆಯನ್ನು ಹೊಂದಿದೆ. ನಾನು ಈ ಕುರಿತು ವರದಿ ನೀಡುವ ಅಗತ್ಯವಿಲ್ಲ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ನಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂದಿಸಲು ಸಂಘಟನೆಗಳು ಮುಂದೆ ಬಂದಿವೆ. ಇದಕ್ಕಾಗಿ ಅವರಿಗೆ ಪ್ರೋತ್ಸಾಹ ಹಾಗೂ ಬೆಂಬಲ ನೀಡಲು ಕಾಂಗ್ರೆಸ್ ಪಕ್ಷದ ಧ್ವಜದಡಿ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx