ತುಮಕೂರು: ನಗರದ ಐತಿಹಾಸಿಕ ಸಿದ್ಧಗಂಗಾ ಮಠಕ್ಕೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಲಿಂಗೈಕ್ಯ ‘ನಡೆದಾಡುವ ದೇವರು’ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಭಕ್ತಿಯಿಂದ ಪೂಜೆ ಸಲ್ಲಿಸಿ, ಗೌರವ ನಮನಗಳನ್ನು ಅರ್ಪಿಸಿದರು.
ಗದ್ದುಗೆ ಪೂಜೆಯ ನಂತರ ರಾಷ್ಟ್ರಪತಿಗಳು ಮಠದ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಮಠದ ದಾಸೋಹ ಮತ್ತು ಶಿಕ್ಷಣ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಿದ್ಧಗಂಗಾ ಮಠದ ಈಗಿನ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿತ್ತು. 3 ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, 8 ಡಿವೈಎಸ್‌ಪಿಗಳು, 29 ಸರ್ಕಲ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಸುಮಾರು 1,181ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಮಠಕ್ಕೆ ಆಗಮಿಸುವ ಭಕ್ತರಿಗಾಗಿ ಬೆಳಿಗ್ಗೆಯಿಂದಲೇ ವಿಶೇಷ ದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಮಠದ ಐದಾರು ಕಡೆಗಳಲ್ಲಿ ಶಾಮಿಯಾನ ಹಾಕಿ ಭಕ್ತರಿಗೆ ಅಚ್ಚುಕಟ್ಟಾಗಿ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ರಾಷ್ಟ್ರಪತಿಗಳ ಭೇಟಿಯಿಂದಾಗಿ ಮಠದ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


