ಬೆಂಗಳೂರು: ಬೆಲೆ ಏರಿಕೆಯ ಗ್ಯಾರಂಟಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಬಜೆಟ್ ಮೇಲೆ ಈ ವಿಷಯಗಳ ಕುರಿತು ಚರ್ಚಿಸಲಿದ್ದೇವೆ. ರಾಜ್ಯದ ಬಜೆಟ್ ಕುರಿತು ಅಧಿವೇಶನದಲ್ಲಿ ಚರ್ಚೆ ಆರಂಭವಾಗಿದೆ. ನಾನು ಕೂಡ ಬಜೆಟ್ ಬಗ್ಗೆ ಚರ್ಚೆ ಆರಂಭಿಸಿದಾಗ ಆಡಳಿತ ಪಕ್ಷದ ಸದಸ್ಯರು, ಅಧಿಕಾರಿಗಳು ಇರಲಿಲ್ಲ; ಹಾಗಾಗಿ ಮಾತು ಮೊಟಕುಗೊಳಿಸಿದೆ. ಸೋಮವಾರ ಅಥವಾ ಮಂಗಳವಾರ ಮಾತನಾಡಲಿದ್ದೇನೆ ಎಂದರು.
ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಒಂದೆಡೆ ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಾಡಿನ ಜನರ, ಕೃಷಿಕರ, ಬಡವರ ಕಣ್ಣೀರನ್ನು ಒರೆಸಬೇಕಿದ್ದ ಬಜೆಟ್, ಆ ನಿರೀಕ್ಷೆಗಳನ್ನು ಸಾಕಾರಗೊಳಿಸಿಲ್ಲ ಎಂದು ಅವರು ಟೀಕಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4