ಪ್ರಧಾನಿ ಮೋದಿಯವರನ್ನು 6 ವರ್ಷ ಚುನಾವಣೆಯಿಂದ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಅವರನ್ನು ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸಬೇಕಂದು ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಕೋರ್ಟ್ ವಜಾ ಮಾಡಿದೆ.
ವಕೀಲ ಆನಂದ್ ಎಸ್. ಜೊಂಧಳೆ ಅವರು ಉತ್ತರಪ್ರದೇಶದ ಪಿಲಿಬಿತ್ನಲ್ಲಿ ಏ.6ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸಿಖ್ ಮತ್ತು ಹಿಂದೂ ಭಕ್ತರ ಭಕ್ತಿ ಬಗ್ಗೆ ಉಲ್ಲೇಖಸಿದ್ದರು ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂದು ಅರ್ಜಿಯಲ್ಲಿ ತಿಳಿಸಿದ್ದರು.
ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಎಫ್ ಐಆರ್ ದಾಖಲಿಸಲು ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1951ರ ಅಡಿಯಲ್ಲಿ ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಲು ಮನವಿ ಮಾಡಲಾಗಿತ್ತು.
ನ್ಯಾಯಾಲಯ ಹೇಳಿದ್ದೇನು?
ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಚಿನ್ ದತ್ತಾ ನೇತೃತ್ವದ ಪೀಠ ಅರ್ಜಿದಾರರು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಊಹಿಸಿರುವುದರಿಂದ ಅರ್ಜಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ ಎಂದು ಗಮನಿಸಿ, ಯಾವುದೇ ದೂರಿನ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಳ್ಳುವಂತೆ ಆಯೋಗಕ್ಕೆ ಸೂಚಿಸಲು ಸಾಧ್ಯವಿಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296