ತುಮಕೂರು: ಮಕ್ಕಳಿಗೆ ಗುಣಮಟ್ಟದ ಆರೋಗ್ಯ, ಶಿಕ್ಷಣ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಿಂದ ಮಕ್ಕಳ ಹಕ್ಕುಗಳ ಕುರಿತು ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಸತಿ ನಿಲಯಗಳ ಶೌಚಾಲಯ ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರಲ್ಲದೆ, ಮಕ್ಕಳ ಪಾಲನಾ ಸಂಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ನಿಯಮಾನುಸಾರ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಸತಿ ನಿಲಯಗಳಲ್ಲಿ ಅಡುಗೆ ಮಾಡಿದ ನಂತರ ಆಹಾರದ ಮಾದರಿಯನ್ನು 24 ಗಂಟೆಗಳ ಕಾಲ ಸಂಗ್ರಹಿಸಿಡಬೇಕು. ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಮಕ್ಕಳ ಸೇವನೆಗೆ ಬಳಸಬಾರದು. ಆಹಾರ ಕೊಠಡಿಯಲ್ಲಿ ಸಂಗ್ರಹಿಸಿರುವ ಪದಾರ್ಥಗಳ ಎಕ್ಸ್ಪೈರಿ ದಿನಾಂಕವನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ವಸತಿ ನಿಲಯ ಹಾಗೂ ಶಾಲೆಗಳಲ್ಲಿರುವ ಗ್ರಂಥಾಲಯದ ಪುಸ್ತಕಗಳನ್ನು ಮಕ್ಕಳು ನಿಯಮಿತವಾಗಿ ತೆಗೆದುಕೊಂಡು ಓದುವಂತೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಮಕ್ಕಳ ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ಸುರಕ್ಷತೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಂತೋಷ್ ಕುಮಾರ್ ಅವರು ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ವಸತಿ ನಿಲಯಗಳಲ್ಲಿ ಮಕ್ಕಳಿಗೆ ತರಕಾರಿ, ಸೊಪ್ಪು, ಕಾಳು ಸೇರಿದಂತೆ ಪೌಷ್ಟಿಕ ಆಹಾರವನ್ನೇ ನೀಡಬೇಕು. ನಿಲಯದ ಅಡುಗೆ ಕೋಣೆಯನ್ನು ಪರಿಶೀಲಿಸಿ ಆಹಾರ ತಯಾರಿಕೆಯ ವೇಳೆ ಸ್ವಚ್ಛತೆ ಮತ್ತು ಗುಣಮಟ್ಟವನ್ನು ಕಾಪಾಡಬೇಕು. ಮಕ್ಕಳಿಗೆ ನಿಯಮಿತವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅಧಿಕಾರಿ/ಸಿಬ್ಬಂದಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ, ಜಿಲ್ಲಾ ಶಸ್ತ್ರಚಿತ್ರಕ ಕೆ.ಡಾ.ಅಸ್ಗರ್ ಬೇಗ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ: ಸಿದ್ದರಾಮಣ್ಣ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಭಾಗವಹಿಸಿದ್ದರು.
ತುಮಕೂರು ನಗರದ ಎಸ್.ಎಸ್.ಪುರಂ ಮುಖ್ಯ ರಸ್ತೆಯಲ್ಲಿರುವ ಶ್ರೀ ಭೈರವೇಶ್ವರ ಸಹಕಾರ ಬ್ಯಾಂಕ್ನ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಟಿ.ಆರ್.ಚಿಕ್ಕರಂಗಯ್ಯ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಕೆ.ನಟೇಶ್, ನಿರ್ದೇಶಕ ಬಿ.ಟಿ.ಲಕ್ಷ್ಮಿ ಗೌಡ, ಎಸ್ .ನಾರಾಯಣಗೌಡ, ರಂಗಮನೆ ಕಾಮೇಶ್, ಎಸ್.ಸೌಭಾಗ್ಯ, ಕೃಷ್ಣಮೂರ್ತಿ, ಪಿ.ಶಾಮಣ್ಣ, ಸಿಇಒ ತಿಮ್ಮೇಗೌಡ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
