ಮಧುಗಿರಿ : ಪಟ್ಟಣದ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಡಿಸೆಂಬರ್ 12ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರು ಮುಂದಾಗಬೇಕು ಎಂದು ನ್ಯಾಯಾಧೀಶರಾದ ಸುಮಂಗಲ ಎಸ್. ಬಸವಣ್ಣೂರ್ ಮನವಿ ಮಾಡಿದರು.
ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಈ ವರ್ಷದ ಕೊನೆಯ ರಾಷ್ಟ್ರೀಯ ಲೋಕ ಅದಾಲತ್ ಆಗಿದ್ದು, ರಾಜ್ಯದ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಲೋಕ ಅದಾಲತ್ನಲ್ಲಿ ಮುಖ್ಯವಾಗಿ ಪಾಲು ವಿಭಾಗದ ದಾವೆಗಳು, ಹಣ ವಸೂಲಾತಿ ಪ್ರಕರಣಗಳು ಹಾಗೂ ಚೆಕ್ ಬೌನ್ಸ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಇದರೊಂದಿಗೆ ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು ಮತ್ತು ನಿರ್ವಹಣಾ ವೆಚ್ಚಕ್ಕೆ ಸಂಬಂಧಿಸಿದ ಕೆಲವು ಪ್ರಕರಣಗಳನ್ನೂ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಲೋಕ ಅದಾಲತ್ ಮೂಲಕ ಉಭಯ ಪಕ್ಷಗಾರರು ಪರಸ್ಪರ ಒಪ್ಪಿಗೆಯಿಂದ ರಾಜಿ ಮಾಡಿಕೊಂಡರೆ ಪ್ರಕರಣಗಳ ಸುದೀರ್ಘ ವಿಳಂಬ ತಪ್ಪಿಸಿ ತ್ವರಿತವಾಗಿ ಪರಿಹಾರ ಕಂಡುಕೊಳ್ಳಬಹುದು. ಇದರಿಂದ ನ್ಯಾಯಾಲಯದ ಸಮಯ ಮತ್ತು ಸಾರ್ವಜನಿಕರ ಹಣವೂ ಉಳಿತಾಯವಾಗುತ್ತದೆ. ಅಲ್ಲದೆ, ಉಭಯ ಪಕ್ಷಗಳ ನಡುವಿನ ವೈಮನಸ್ಸು ದೂರವಾಗಿ ಸೌಹಾರ್ದಯುತ ಸಂಬಂಧಕ್ಕೆ ಅವಕಾಶ ಕಲ್ಪಿಸಿದಂತಾಗುತ್ತದೆ. ಆದ್ದರಿಂದ ಸಾರ್ವಜನಿಕರು ಲೋಕ ಅದಾಲತ್ನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನ್ಯಾಯಾಧೀಶರಾದ ವೆಂಕಟಪ್ಪ ಬಿ. ಮಾತನಾಡಿ, ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಲೋಕ ಅದಾಲತ್ ನಲ್ಲಿ ಪಾಲು ವಿಭಾಗದ ದಾವೆಗಳು, ಘೋಷಣಾ ದಾವೆಗಳು, ತಡೆಯಾಜ್ಞೆ ದಾವೆಗಳು, ಮೋಟಾರು ವಾಹನ ಪರಿಹಾರ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಪರಸ್ಪರ ಒಪ್ಪಿಗೆಯೊಂದಿಗೆ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಅಧಿಕ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ವೈಜನಾಥ್ ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
