ಚಿಕ್ಕನಾಯಕನಹಳ್ಳಿ : ಹಲವು ವರ್ಷಗಳ ಹೋರಾಟದ ಫಲವಾಗಿ ನಿವೇಶನ ಪಡೆದುಕೊಂಡಿರುವ ಅಲೆಮಾರಿ ಬುಡಕಟ್ಟು ಸಮುದಾಯದ ಕುಟುಂಬಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ತಿಳಿಸಿದರು.
ಪಟ್ಟಣದ ಹೊರವಲಯದ ದಬ್ಬೇಘಟ್ಟದ ಬಳಿ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ (ಕೆಆರ್ಡಿಎಲ್) ವತಿಯಿಂದ 1 ಕೋಟಿ 16 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಅಲೆಮಾರಿ ಬುಡಕಟ್ಟು ಸಮುದಾಯದ ಕುಟುಂಬಗಳಿಗೆ ವಾಸಿಸಲು ಜಾಗ ಗುರುತಿಸಿ ನಿವೇಶನಗಳನ್ನು ನೀಡಲಾಗಿದೆ. ಈ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ, ಮನೆ, ಕುಡಿಯುವ ನೀರು, ವಿದ್ಯುತ್ ಬೆಳಕು ಹಾಗೂ ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅದರಂತೆ ಈ ಭಾಗದ ಜನರ ಸಂಚಾರಕ್ಕೆ ಅನುಕೂಲವಾಗುವಂತೆ ಕೆಆರ್ಡಿಎಲ್ ವತಿಯಿಂದ 1.16 ಕೋಟಿ ರೂ. ವೆಚ್ಚದಲ್ಲಿ ಸುಮಾರು 800 ಮೀಟರ್ ಉದ್ದದ ಸಿಸಿ ರಸ್ತೆ ನಿರ್ಮಾಣ ಕೈಗೊಳ್ಳಲಾಗಿದೆ ಎಂದರು.
ರಸ್ತೆ ನಿರ್ಮಾಣದಿಂದ ಇಲ್ಲಿನ ಕುಟುಂಬಗಳಿಗೆ ಸಂಚಾರದ ಅನುಕೂಲವಾಗುವುದರ ಜೊತೆಗೆ ಪ್ರದೇಶದ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಅಕ್ಕಪಕ್ಕದ ಜಮೀನುಗಳ ರೈತರು ಅಗತ್ಯ ಸಹಕಾರ ನೀಡಬೇಕು. ಎಲ್ಲರ ಸಹಕಾರದಿಂದ ಅಗಲವಾದ ಹಾಗೂ ಗುಣಮಟ್ಟದ ರಸ್ತೆ ನಿರ್ಮಿಸಲು ಸಾಧ್ಯವಾಗುತ್ತದೆ. ನಿರ್ಮಾಣವಾಗುವ ರಸ್ತೆಯನ್ನು ಸಾರ್ವಜನಿಕರು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಹಕ್ಕುಪತ್ರ, ಮನೆ ಮಂಜೂರಿಗೆ ಮನವಿ
ಅಲೆಮಾರಿ ಬುಡಕಟ್ಟು ಸಮುದಾಯದ ಮುಖಂಡ ವೆಂಕಟೇಶ್ ಮಾತನಾಡಿ, ಶಾಸಕರಾದ ಸಿ.ಬಿ. ಸುರೇಶ್ಬಾಬು ಅವರು ನಮ್ಮ ಸಮುದಾಯದ ಕುಟುಂಬಗಳಿಗೆ ನಿವೇಶನಗಳನ್ನು ಒದಗಿಸಿದ್ದಾರೆ. ಇದೀಗ ರಸ್ತೆ ನಿರ್ಮಾಣ ಕಾಮಗಾರಿಯನ್ನೂ ಕೈಗೆತ್ತಿಕೊಂಡಿರುವುದು ಸಂತಸದ ವಿಷಯವಾಗಿದೆ. ಈ ಪ್ರದೇಶ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವುದರಿಂದ ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರಗಳನ್ನು ವಿತರಿಸಿ, ಮನೆಗಳನ್ನು ಮಂಜೂರು ಮಾಡಿಕೊಡಬೇಕು ಎಂದು ಶಾಸಕರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಉಪಾಧ್ಯಕ್ಷ ರಾಜಶೇಖರ್, ಸಹಾಯಕ ಕಾರ್ಯಪಾಲಕ ಅಭಿಯಂತರ ವಿವೇಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
