ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸರ್ಕಾರದ ಆದೇಶ ಎತ್ತಿ ಹಿಡಿದಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಪಿಎಸ್ ಐ ಮರು ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.
ಅಕ್ರಮದ ಕಾರಣಕ್ಕೆ ಪರೀಕ್ಷೆ ರದ್ದು ಮಾಡಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ನ್ಯಾ. ದಿನೇಶ್ ಕುಮಾರ್, ನ್ಯಾ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.
ಅಕ್ರಮದಲ್ಲಿ ಭಾಗಿಯಾಗದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಕ್ಕೆ ಅರ್ಜಿದಾರರು ಮನವಿ ಮಾಡಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ಹೊರಡಿಸಿತು. ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸುವಂತೆ ಕೋರ್ಟ್ ಸೂಚನೆ ನೀಡಿದೆ.


