ತುಮಕೂರು: ಜಿಲ್ಲೆಯಲ್ಲಿ ಲಿಂಗಾನುಪಾತ ಸುಧಾರಣೆಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯರಿಗೆ ನಿರಂತರವಾಗಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ.ಚಂದ್ರಶೇಖರ್ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪಿಸಿ & ಪಿಎನ್ ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಿಂಗಾನುಪಾತವನ್ನು ಸಮತೋಲನದಲ್ಲಿಡುವ ನಿಟ್ಟಿನಲ್ಲಿ ಭ್ರೂಣಲಿಂಗ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಪಿಸಿ & ಪಿಎನ್ ಡಿಟಿ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪ್ರತಿ 3 ತಿಂಗಳಿಗೊಮ್ಮೆ ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಲಾಗುತ್ತಿದೆ. ಕಾಯ್ದೆಯನ್ನು ಉಲ್ಲಂಘನೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಹೊಸ ನೋಂದಣಿ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ್ದ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಅನುಮತಿ ನೀಡಲಾಯಿತು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಖಾ.ಕೆ.ಬಿ, ಜಿಲ್ಲಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಸಂತೋಷ್, ವಕೀಲ ಕುಮಾರಸ್ವಾಮಿ ಎಂ.ಎನ್., ಸಮಾಜ ಸೇವಕಿ ಮಲ್ಲಿಕಾ ಜಿ. ಬಸವರಾಜು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx