ತುಮಕೂರು: ಜಿಲ್ಲೆ ಕೊರಟಗೆರೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಶಾಲೆಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಶೇ.100 ರಷ್ಟು ತಲುಪಿಸುವಂತೆ ಅಧಿಕಾರಿಗಳು ಸತತ ಶ್ರಮವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅದೇ ರೀತಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿನ ಅರ್ಹ ರೈತರಿಗೆ ವಸತಿ ಯೋಜನೆಯಡಿ ನಿವೇಶನಗಳನ್ನು ವಿಂಗಡಿಸಿ ವಿತರಿಸುವ ಕೆಲಸ ಹೆಚ್ಚು ಹೆಚ್ಚು ಆಗಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡುವ ಮೂಲಕ ಬಡವರಿಗೆ ಮನೆ ನೀಡಲು ಶ್ರಮಿಸಬೇಕಿದೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊರಟಗೆರೆ ತಾಲ್ಲೂಕಿನಲ್ಲಿ ನರೇಗಾ ಯೋಜನೆಯಡಿ ಉತ್ತಮ ಕೆಲಸಗಳು ಆಗುತ್ತಿವೆ. ಇದು ಸಂತೋಷದ ವಿಷಯ ಎಂದು ಸಚಿವರು, ಅರ್ಹ ಬಡ ಜನತೆಗೆ ಸರ್ಕಾರದ ಸವಲತ್ತುಗಳನ್ನು ನೀಡುವಲ್ಲಿ ಅನಗತ್ಯ ವಿಳಂಬ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಎಚ್ಚರಿಗೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಮಧುಗಿರಿ ಉಪವಿಭಾಗಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4