ಬೆಂಗಳೂರು: ವಿಕಲಚೇತನರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ.
ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ವಿಧಾನಸೌಧದಲ್ಲಿ ಸೋಮವಾರ ನಡೆದ ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಚಿವರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಸಚಿವರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಶೀಘ್ರವೇ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.


