ಬೆಂಗಳೂರು: ಲೋಡ್ ಶೆಡ್ಡಿಂಗ್ ಪರಿಣಾಮವಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುವ ಪರಿಸ್ಥಿತಿಗೆ ತಲುಪಿದ್ದು, ರೈತರ ಮತ್ತು ಕೃಷಿಕರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರೊಂದಿಗೆ ಸೇರಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಎಚ್ಚರಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಯಂತೆ ಸರಿಯಾದ ಪ್ರಮಾಣದಲ್ಲಿ ಮಳೆ ಆಗಿಲ್ಲ. ರಾಜ್ಯದ ಎಲ್ಲ ಕಡೆಗಳಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಜಲಾಶಯಗಳಲ್ಲಿ ಸಹ ನೀರಿನ ಸಂಗ್ರಹ ಪ್ರಮಾಣ ತೃಪ್ತಿಕರವಾಗಿಲ್ಲ. ಬಿತ್ತನೆ ಪ್ರಮಾಣ ಸಹ ಕುಂಠಿತಗೊಂಡಿದೆ. ಇಂತಹ ಸಂದರ್ಭದಲ್ಲಿ ಐಪಿ ಸೆಟ್ ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದಿದ್ದರೆ ಈಗ ಬಿತ್ತಿರುವ ಶೇ.80ರಷ್ಟು ಬೆಳೆಗಳು ಒಣಗಿ, ರಾಜ್ಯದಲ್ಲಿ ಆಹಾರ ಉತ್ಪನ್ನಗಳ ಮೇಲೆ ದೊಡ್ಡ ಹೊಡೆತ ಬೀಳುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಇದರ ಪರಿಣಾಮವಾಗಿ ರೈತರು ಆರ್ಥಿಕವಾಗಿಯೂ ಜರ್ಜರಿತರಾಗುತ್ತಾರೆ. ಹಾಗಾಗಿ ವಿದ್ಯುತ್ ಖರೀದಿಸಿ ಒದಗಿಸಲು ತಕ್ಷಣ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.


