ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗಳಿಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಬಿರುಸಾಗಿದ್ದು, ಬಿಜೆಪಿ ಈಗಾಗಲೇ ಈ ಚುನಾವಣೆಗೆ ಸಂಭಾವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿಕೊಟ್ಟಿದೆ. ಕಾಂಗ್ರೆಸ್‌ನಲ್ಲೂ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆದಿದ್ದು, ರಾಜ್ಯಸಭೆಗೆ ರಾಜ್ಯದಿಂದ ಗಾಂಧಿ ವಂಶದ ಕುಡಿ ಪ್ರಿಯಾಂಕಗಾಂಧಿ ಅವರನ್ನು ಆಯ್ಕೆ ಮಾಡಲು ರಾಜ್ಯ ಕಾಂಗ್ರೆಸ್ ನಾಯಕರು ಹೆಚ್ಚಿನ ಮುತುವರ್ಜಿ ತೋರಿದ್ದಾರೆ.
ಪ್ರಿಯಾಂಕ ಗಾಂಧಿ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಕಳುಹಿಸಲು ರಾಜ್ಯ ಕಾಂಗ್ರೆಸ್ ನಾಯಕರು ಉತ್ಸುಕರಾಗಿದ್ದು, ರಾಜ್ಯದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಪ್ರಿಯಾಂಕಗಾಂಧಿ ಅವರ ಮನವೊಲಿಕೆಗೂ ರಾಜ್ಯ ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸಿದ್ದಾರೆ.
ಪ್ರಿಯಾಂಕಗಾಂಧಿ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಕಳುಹಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಸಕ್ತಿ ತೋರಿದ್ದು, ರಾಜಸ್ಥಾನದ ಉದಯಪುರದಲ್ಲಿ ನಡೆದ ಕಾಂಗ್ರೆಸ್‌ನ ಚಿಂತನ-ಮಂಥನ ಸಮಾವೇಶದ ಸಂದರ್ಭದಲ್ಲಿ ಪ್ರಿಯಾಂಕ ಗಾಂಧಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಬಗ್ಗೆ ರಾಹುಲ್‌ಗಾಂಧಿ ಅವರ ಜತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯದ ಕೆಲ ಕಾಂಗ್ರೆಸ್ ನಾಯಕರ ಜತೆ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಿಯಾಂಕಗಾಂಧಿ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಿದರೆ ಪಕ್ಷಕ್ಕೆ ಉಂಟಾಗುವ ಅನುಕೂಲವಾಗಿ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ಬರಲಿದೆ ಎನ್ನುವುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.
ಪ್ರಿಯಾಂಕಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾಗಲು ಬಯಸಿದರೆ ತಮ್ಮ ಅಭ್ಯಂತರವೇನಿಲ್ಲ. ಪ್ರಿಯಾಂಕ ಅವರ ಮನವೊಲಿಸಿ ಎಂದು ರಾಹುಲ್‌ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ ಎನ್ನಲಾಗಿದೆ.
ರಾಜ್ಯಸಭೆಗೆ ಜೂನ್ ೧೦ ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮೇ ೩೧ ಕೊನೆಯ ದಿನವಾಗಿದೆ. ಶತಾಯಗತಾಯ ಪ್ರಿಯಾಂಕಗಾಂಧಿ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಕಳುಹಿಸಲು ಕಾಂಗ್ರೆಸ್ ನಾಯಕರು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಇದಕ್ಕೆ ಪ್ರಿಯಾಂಕಗಾಂಧಿ ಅವರು ಒಪ್ಪುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.
ಪರಿಷತ್ ಟಿಕೆಟ್‌ಗೆ ಪೈಪೋಟಿ ಜೂನ್ ೩ ರಂದು ನಡೆಯಲಿರುವ ವಿಧಾನಪರಿಷತ್‌ನ ೭ಸ್ಥಾನಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಲು ಭಾರಿ ಪೈಪೋಟಿಯೇ ನಡೆದಿದೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕಿರುವ ಬಲಾಬಲದ ಮೇಲೆ ಕಾಂಗ್ರೆಸ್ ೨ ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದಾಗಿದೆ. ಈ ಎರಡು ಸ್ಥಾನಗಳಿಗೆ ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಮಾಜಿ ಸಭಾಪತಿ ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ್, ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪುಷ್ಪಾ ಅಮರ್‌ನಾಥ್, ಮಾಜಿ ಮೇಯರ್ ರಾಮಚಂದ್ರಪ್ಪ, ಹಾಲಿ ಸದಸ್ಯರಾದ ಆಲ್ಲಂ ವೀರಭದ್ರಪ್ಪ, ಆರ್.ಬಿ. ತಿಮ್ಮಾಪುರ ಇವರುಗಳು ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ.ಇನ್ನೆರಡು ಮೂರು ದಿನಗಳಲ್ಲಿ ಕಾಂಗ್ರೆಸ್ ನಾಯಕರು ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB