ಸರಗೂರು: ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುವುದರಿಂದ ಅವರ ದೌರ್ಬಲ್ಯಗಳ ಹೊರತಾಗಿಯೂ ಅದಮ್ಯ ಶಕ್ತಿ ಅವರಲ್ಲಿದೆ ಎಂಬುದನ್ನು ನಿರೂಪಿಸಲು ಸಾಧ್ಯ ಎಂದು ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಆರ್ಶೀವಾದ ನೀಡಿದರು.
ಪಟ್ಟಣದ ಅಖಿಲ ನಾಮಧಾರಿಗೌಡ ಸಮುದಾಯದ ಭವನದಲ್ಲಿ ಮಂಗಳವಾರದಂದು ಶ್ರೀ ಚಿಕ್ಕ ದೇವಮ್ಮ ವಿಶೇಷಚೇತನರ ಕ್ಷೇಮಾಭಿವೃದ್ಧಿ ಒಕ್ಕೂಟ ಹಾಗೂ ಜೀವನಜ್ಯೋತಿ ವಿಶೇಷಚೇತನ ಕ್ಷೇಮಾಭಿವೃದ್ಧಿ ಒಕ್ಕೂಟ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ ಅಖಿಲ ನಾಮಧಾರಿಗೌಡರ ಸಂಘ, ಸ್ಥಳಿಯ ಸಂಘ ಸಂಸ್ಥೆಗಳು ಸಹಭಾಗಿತ್ವದೊಂದಿಗೆ ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ ಮಾತನಾಡಿದರು.
ವಿಕಲಚೇತನರ ಏಳಿಗೆಗೆ ಕುಟುಂಬದ ಸದಸ್ಯರು ಮಾತ್ರವಲ್ಲದೇ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು. ಅಂಗವಿಕಲರಿಗಾಗಿ ಕಾನೂನು ಅಡಿಯಲ್ಲಿ ಅನೇಕ ಹಕ್ಕುಗಳನ್ನು ನೀಡಿದ್ದು, ಅವರ ಶ್ರೇಯಸ್ಸು ಹಾಗೂ ಮಾನವ ಹಕ್ಕುಗಳಿಗೆ ಚ್ಯುತಿ ತರದಂತೆ ಅವರ ಅಭಿವೃದ್ಧಿಯಲ್ಲಿ ಸಹಕಾರ ನೀಡಬೇಕು ಎಂದು ಪ್ರತಿಪಾದಿಸಿದರು.
ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ವಿಕಲಚೇತನರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜ ಹಾಗೂ ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.
ವಿಕಲಚೇತನ ಮಕ್ಕಳ ಸಬಲೀಕರಣಕ್ಕಾಗಿ ಅನೇಕ ಶಾಲಾ– ಕಾಲೇಜು ಹಾಗೂ ಸಂಘ–ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಕಾಲದಲ್ಲಿ ವಿಕಲಚೇತನರಿಗೆ ವಿದ್ಯಾಭ್ಯಾಸದ ಅವಕಾಶಗಳ ಜೊತೆಗೆ ಕೌಶಲಾಭಿವೃದ್ಧಿಗಳ ಕಲಿಕೆಯು ಅವರ ಬದುಕಿನಲ್ಲಿ ಸಾಧನೆ ಮಾಡುವಂತಹ ಭರವಸೆ ಮೂಡಿಸುತ್ತಿದೆ ಎಂದು ಹೇಳಿದರು.
ವಿಶೇಷಚೇತನರ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮಿಗಳು ಕೆ.ಶ್ರೀನಿವಾಸ ಕುಮಾರ್ ಮಾತನಾಡಿ, ವಿಕಲಚೇತನರ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಬಗೆಗಿನ ಮಾಹಿತಿಯನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ತಿಳಿಸಿದರು.
ವಿವೇಕಾನಂದ ಸ್ಮಾರಕ ಆಸ್ಪತ್ರೆ ಮೂಳೆ ಮತ್ತು ಕೀಲು ವೈದ್ಯರು ಡಾ ಎಂ ಆರ್ ಸೀತಾರಾಮ್ ಮಾತನಾಡಿ ಸ್ಥಳೀಯ ಸಂಸ್ಥೆಗಳಲ್ಲಿ ಅಂಗವಿಕಲರಿಗೆ ಅನುಕೂಲವಾಗುವಂತೆ ವೈದ್ಯಕೀಯ ವೆಚ್ಚ, ವಿದ್ಯಾರ್ಥಿವೇತನ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಇದೇ ಸಂದರ್ಭದಲ್ಲಿ ಎಲ್ಲಾ ತಾಲ್ಲೂಕುಗಳ ವಿಶೇಷ ಮಕ್ಕಳಿಗೆ ಆಯೋಜಿಸಲಾದ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿಶೇಷ ಶಾಲಾ ಮಕ್ಕಳು ಸಿದ್ಧಪಡಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಚಾಮನಾಯಕ, ಇಓ ಪ್ರೇಮ್ ಕುಮಾರ್, ಅಡಳಿತ ಆರೋಗ್ಯಾಧಿಕಾರಿ ಡಾ.ಪಾರ್ಥಸಾರಥಿ, ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಪಪಂ ಅಧ್ಯಕ್ಷೆ ಚೈತ್ರ ಸ್ವಾಮಿ, ಉಪಾಧ್ಯಕ್ಷ ಶಿವಕುಮಾರ್, ವರ್ತಕ ಮಂಡಳಿ ಅಧ್ಯಕ್ಷ ಎಸ್ ಪಿ ಪ್ರಸಾದ್, ಲಯನ್ಸ್ ಕ್ಲಬ್ ಅಧ್ಯಕ್ಷ ಕಬಿನಿ ಭಾಸ್ಕರ್, ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಬಿ.ನಾಗರಾಜು, ವಿಕಲಚೇತನರ ಸಂಯೋಜಕರಾದ ಎಸ್.ಎಸ್.ಮಹಾದೇವಯ್ಯ, ಜವರಾಜು, ಜೀವನ್ ಜ್ಯೋತಿ ವಿಶೇಷಚೇತನರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಎನ್.ನಾಗರಾಜು, ರಮೇಶ್ , ಪುಟ್ಟ, ನಾಗೇಂದ್ರಯ್ಯ ,ಇನ್ನೂ ಮುಖಂಡರು ಸೇರಿದಂತೆ ಹಾಗೂ ವಿಶೇಷಚೇತನರು ಹಾಗೂ ಸ್ವಾಮಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
ವರದಿ ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


