ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ನಿರುದ್ಯೋಗಿ ಶಿಕ್ಷಕ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ.
15,000 ಶಿಕ್ಷಕರ ನೇಮಕ: 2026-27ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.
ಉನ್ನತ ಶಿಕ್ಷಣದಲ್ಲೂ ನೇಮಕಾತಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಮತ್ತು ಯುವಿಸಿಇ ವಿಶ್ವವಿದ್ಯಾಲಯಗಳಲ್ಲಿ ಒಟ್ಟು 2,000 ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ. ಅಲ್ಲದೆ, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಹಂತ ಹಂತವಾಗಿ 1,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಮಾನಸಿಕ ಆರೋಗ್ಯಕ್ಕೆ ಆದ್ಯತೆ: ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು 204 ಬಿಆರ್‌ಸಿ (BRC) ಕೇಂದ್ರಗಳಲ್ಲಿ ತಲಾ ಒಬ್ಬರಂತೆ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲು ನಿರ್ಧರಿಸಲಾಗಿದೆ.
ಇಂಗ್ಲಿಷ್ ಭಾಷಾ ತರಬೇತಿ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಶಿಕ್ಷಕರಿಗೆ 24 ಕೋಟಿ ರೂ. ವೆಚ್ಚದಲ್ಲಿ ಇಂಗ್ಲಿಷ್ ಭಾಷಾ ತರಬೇತಿ ನೀಡಲಾಗುವುದು.
ವಿದ್ಯಾರ್ಥಿನಿಯರಿಗೆ ಮೂಲಸೌಕರ್ಯ: ಶೇ. 50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಿರುವ 25 ಸರ್ಕಾರಿ ಪದವಿ ಕಾಲೇಜುಗಳು ಹಾಗೂ ಆಯ್ದ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು 31 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.
ರಾಜ್ಯದ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಬಜೆಟ್ ಪೂರಕವಾಗಿದ್ದು, ಬೋಧಕ ಹುದ್ದೆಗಳ ಭರ್ತಿಯಿಂದ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಚೈತನ್ಯ ಬರಲಿದೆ ಎಂದು ನಿರೀಕ್ಷಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


