ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಲು ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.
ಡಿಸಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದ ಅವರು, ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಲ್ಲಿ ಮಳೆಯಿಂದ ಅಥವಾ ಇತರ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಸಂದರ್ಭದಲ್ಲಿ ಬೆಳೆ ವಿಮೆ ನಷ್ಟ ಪರಿಹಾರವನ್ನು ಪಾವತಿಸುವ ಅವಕಾಶವಿದೆ. ಪ್ರಸ್ತುತ ಸಾಲಿನಲ್ಲಿ ಎಲ್ ನಿನೋದಿಂದ ಮಳೆ ಕೊರತೆಯಿದ್ದು, ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಹಾಗೂ ಬೆಳೆ ಸಾಲ ಪಡೆಯದ ಎಲ್ಲಾ ರೈತರು ವಿಮಾ ಕಂತು ಪಾವತಿಸಿ ಭಾಗವಹಿಸಬಹುದು.
ಈ ಯೋಜನೆಯಡಿ ಮಳೆಯಿಂದ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಸಂದರ್ಭದಲ್ಲಿ ಬೆಳೆ ವಿಮೆ ನಷ್ಟ ಪರಿಹಾರವನ್ನು ಪಾವತಿಸಲಾಗುವುದು. ಇದುವರೆಗೆ 44,154 ರೈತರು ನೋಂದಣಿಯಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಬೇಕು. ಈ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಬ್ಯಾಂಕ್ಗಳಲ್ಲಿ ಸಾಲ ಪಡೆದ ರೈತರನ್ನು ಕಡ್ಡಾಯವಾಗಿ ನೋಂದಾಯಿಸಬೇಕು. ಈ ನಿಟ್ಟಿನಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಎಲ್ಲಾ ಬ್ಯಾಂಕ್ಗಳಿಗೆ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮಾರ್ಗಸೂಚಿಗಳನ್ವಯ ಆರ್ಥಿಕ ಸಂಸ್ಥೆಗಳು / ಬ್ಯಾಂಕ್ / ಗ್ರಾಮ–ಒನ್ ಕೇಂದ್ರಗಳು (Grama One Centres) ಸಾಮಾನ್ಯ ಸೇವಾ ಕೇಂದ್ರಗಳು (Common Service Centres) ಗಳಲ್ಲಿ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದರು. ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು, ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ನೋಂದಣಿ ಸಮಯಾವಕಾಶ:
ಜಿಲ್ಲೆಯಾದ್ಯಂತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಕೆಳಕಂಡ ನಿಗದಿತ ಸಮಯಾವಕಾಶದೊಳಗೆ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಬೇಕೆಂದು ಡಿಸಿ ಕೋರಿದ್ದು, ಮುಸುಕಿನ ಜೋಳ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ) 31—07–2026, ಈರುಳ್ಳಿ (ನೀರಾವರಿ) 31–07–2026, ರಾಗಿ (ನೀರಾವರಿ) ಮತ್ತು ರಾಗಿ (ಮಳೆಯಾಶ್ರಿತ) 14—08–2026, ಸಾಮೆ (ಮಳೆಯಾಶ್ರಿತ) 14–08–2026, ಹುರುಳಿ (ಮಳೆಯಾಶ್ರಿತ) 14–08–2026, ಭತ್ತ (ನೀರಾವರಿ) 14—08–2026 ಹಾಗೂ ಶೇಂಗಾ (ಮಳೆಯಾಶ್ರಿತ) 14–08–2026 ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ ಎಂದು ತಿಳಿಸಿರುತ್ತಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
