ಮಧುಗಿರಿ: ಪಟ್ಟಣದ ಹೊರವಲಯದ ರಾಜ್ಯ ಹೆದ್ದಾರಿಯ ಹರಿಹರರೊಪ್ಪ ಕ್ರಾಸ್ ಹಾಗೂ ಶ್ರೀವಾರು ಹೋಟೆಲ್ ಸಮೀಪ ಅಳವಡಿಸಲಾಗಿದ್ದ ರಸ್ತೆ ಉಬ್ಬುಗಳನ್ನು (ಸ್ಪೀಡ್ ಬ್ರೇಕರ್) ಇತ್ತೀಚೆಗೆ ತೆರವುಗೊಳಿಸಿರುವುದರಿಂದ ಈ ಭಾಗದಲ್ಲಿ ಅಪಘಾತಗಳ ಆತಂಕ ಹೆಚ್ಚಾಗಿದೆ. ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ರಸ್ತೆ ಉಬ್ಬುಗಳನ್ನು ಮರು ಅಳವಡಿಸಬೇಕು. ಇಲ್ಲವಾದಲ್ಲಿ ಸಾರ್ವಜನಿಕರೊಂದಿಗೆ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್ ಎಚ್ಚರಿಕೆ ನೀಡಿದ್ದಾರೆ.
ಈ ಪ್ರದೇಶದಲ್ಲಿ ಶಾಲೆಯೊಂದು ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ನೂರಾರು ಮಕ್ಕಳು ಹಾಗೂ ಸಾರ್ವಜನಿಕರು ರಾಜ್ಯ ಹೆದ್ದಾರಿಯನ್ನು ದಾಟುತ್ತಾರೆ. ಈ ಹಿಂದೆ ನಿರಂತರ ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ವತಿಯಿಂದ ಇಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗಿತ್ತು.

ಆದರೆ, ಇತ್ತೀಚೆಗೆ ಯಾವುದೇ ಮುನ್ಸೂಚನೆ ನೀಡದೆ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿರುವುದರಿಂದ ವಾಹನಗಳು ಹೆಚ್ಚಿನ ವೇಗದಲ್ಲಿ ಸಂಚರಿಸುತ್ತಿವೆ. ಇದರಿಂದ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ರಸ್ತೆ ದಾಟಲು ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಶಾಲೆ ಇರುವ ಸೂಕ್ಷ್ಮ ಪ್ರದೇಶದಲ್ಲಿ ಮಕ್ಕಳ ಸುರಕ್ಷತೆಗೆ ಪೂರಕವಾಗಿದ್ದ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿರುವುದು ಸರಿಯಲ್ಲ. ಅವುಗಳನ್ನು ತೆರವುಗೊಳಿಸಲು ಕಾರಣವೇನು? ಯಾವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ನಾಗಭೂಷಣ್ ಒತ್ತಾಯಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಶಾಲಾ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ರಸ್ತೆ ಉಬ್ಬುಗಳನ್ನು ಮರು ಅಳವಡಿಸಬೇಕು. ಇಲ್ಲವಾದಲ್ಲಿ ಸ್ಥಳೀಯ ಸಾರ್ವಜನಿಕರ ಸಹಕಾರದೊಂದಿಗೆ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
