ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಗೆ ಬೆಂಗಳೂರಿನ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಮತ್ತೊಂದು ಹಿನ್ನಡೆಯುಂಟಾಗಿದೆ. ಪ್ರಕರಣದಲ್ಲಿ ಅಪ್ರೂವರ್ (ಮಾಫಿ ಸಾಕ್ಷಿ) ಆಗಿರುವ ಆರೋಪಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಒಂದು ವಾರ ಮುಂದೂಡುವಂತೆ ಕೋರಿ ನಟ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದರೊಂದಿಗೆ ನಿಗದಿಯಂತೆ ಸೆಪ್ಟೆಂಬರ್ 28ರ ಸೋಮವಾರವೇ ಪ್ರದೋಷ್ ಅವರ ಹೇಳಿಕೆ ದಾಖಲಾಗುವುದು ಖಚಿತವಾಗಿದೆ.
ಇತ್ತೀಚೆಗೆ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಬೇಕಿದೆ ಎಂದು ದರ್ಶನ್ ಪರ ಹಿರಿಯ ವಕೀಲ ಹಶ್ಮತ್ ಪಾಷಾ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಹೈಕೋರ್ಟ್ ಆದೇಶದ ಪ್ರಮಾಣೀಕೃತ ಪ್ರತಿ ತಡವಾಗಿ ದೊರೆತಿದ್ದು, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕನಿಷ್ಠ 10 ದಿನಗಳ ಕಾಲಾವಕಾಶ ಅಗತ್ಯವಿದೆ ಎಂದು ತಿಳಿಸಿದರು. ಅಲ್ಲದೆ, ಇತರ ಸಾಕ್ಷಿಗಳ ವಿಚಾರಣೆಯನ್ನು ಮುಂದುವರಿಸಿ, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆಯಾಗುವವರೆಗೆ ಪ್ರದೋಷ್ ಅವರ ಹೇಳಿಕೆಯನ್ನು ಮಾತ್ರ ಬಾಕಿ ಇರಿಸಬೇಕು ಎಂದು ಕೋರಿದ್ದರು.
ಈ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಸಿಕ್ಯೂಷನ್ (ಸರ್ಕಾರಿ ಅಭಿಯೋಜಕರು), ಹೈಕೋರ್ಟ್ ತೀರ್ಪು ಪ್ರಕಟವಾದ ದಿನವೇ ಅದರ ಆದೇಶವನ್ನು ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ತಿಳಿಸಿತು. ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಸಚಿನ್ ಅವರು ವಾದಿಸುತ್ತಾ, ಸೆಪ್ಟೆಂಬರ್ 24ರಂದೇ ಪ್ರದೋಷ್ ಅವರಿಗೆ ಅಧಿಕೃತ ಸಮನ್ಸ್ ಜಾರಿಗೊಳಿಸಲಾಗಿದೆ ಎಂದರು. ದರ್ಶನ್ ಪರ ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಹೊಸ ಆಧಾರಗಳಿಲ್ಲ ಎಂದು ವಾದಿಸಿ ಅರ್ಜಿಯನ್ನು ತಿರಸ್ಕರಿಸುವಂತೆ ಕೋರಿದರು. ಪ್ರಾಸಿಕ್ಯೂಷನ್‌ನ ವಾದವನ್ನು ಮಾನ್ಯ ಮಾಡಿದ ನ್ಯಾಯಾಲಯವು ದರ್ಶನ್ ಅವರ ಅರ್ಜಿಯನ್ನು ವಜಾಗೊಳಿಸಿತು.
ಇದೇ ವೇಳೆ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ (ಎ-1) ಪವಿತ್ರಾ ಗೌಡ ಸಲ್ಲಿಸಿದ್ದ ನಿಯಮಿತ ಜಾಮೀನು ಅರ್ಜಿಯನ್ನೂ ಸಹ ನ್ಯಾಯಾಲಯವು ವಜಾಗೊಳಿಸಿದೆ. ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಆದರೆ ನ್ಯಾಯಾಲಯ ಅದನ್ನು ತಳ್ಳಿಹಾಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
