ಬೆಂಗಳೂರು: ಕರ್ನಾಟಕದ ಮಾಜಿ ಲೋಕಾಯುಕ್ತ ಹಾಗೂ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರು ಶುಕ್ರವಾರ ನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸಂತೋಷ್ ಹೆಗ್ಡೆ ಅವರು ಭಾಗವಹಿಸಿದ್ದರು. ವೇದಿಕೆಯ ಮೇಲೆ ಪಿ.ಜಿ.ಆರ್. ಸಿಂಧ್ಯಾ ಅವರೊಂದಿಗೆ ಮಾತನಾಡುತ್ತಾ ಕುಳಿತಿದ್ದ ಸಂದರ್ಭದಲ್ಲಿ ಅವರಿಗೆ ತಲೆಸುತ್ತು ಬಂದಂತಾಗಿ ಕುಸಿದು ಬಿದ್ದಿದ್ದಾರೆ.
ಅಲ್ಲಿದ್ದವರು ಕೂಡಲೇ ಅವರಿಗೆ ನೀರು ಕುಡಿಸಿ ಉಪಚರಿಸಲು ಪ್ರಯತ್ನಿಸಿದರಾದರೂ, ಅವರು ಚೇತರಿಸಿಕೊಳ್ಳದಿದ್ದಾಗ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸಹಾಯಕ್ಕೆ ಬಂದ ಸ್ಪೀಕರ್ ವಾಹನ:
ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಕೂಡಲೇ ಸ್ಪಂದಿಸಿ, ತಮ್ಮ ಸರ್ಕಾರಿ ವಾಹನದಲ್ಲೇ ಸಂತೋಷ್ ಹೆಗ್ಡೆ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ರವಾನಿಸಲು ವ್ಯವಸ್ಥೆ ಮಾಡಿದರು.
ಸಂತೋಷ್ ಹೆಗ್ಡೆ ಅವರು ಮಧುಮೇಹ (Diabetes) ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ರಕ್ತದಲ್ಲಿನ ಸಕ್ಕರೆ ಅಂಶ ದಿಢೀರ್ ಕುಸಿತ (Low Sugar) ಕಂಡಿದ್ದರಿಂದ ಅವರು ಪ್ರಜ್ಞೆ ತಪ್ಪಿ ಬಿದ್ದಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ. ಪ್ರಸ್ತುತ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


