ಮಂಗಳೂರು: ಮಂಗಳೂರಿನಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿದ್ದು, ಈತ 2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದು, ಈತ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.
ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ಬೆನ್ನಲ್ಲೇ ಮಂಗಳೂರು ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಸೆಕ್ಷನ್ 163 ಜಾರಿಗೊಳಿಸಲಾಗಿದೆ. ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
‘ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಹಾಗೂ ಶಶಾಂಕ್ ಜೊತೆ ತೆರಳುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳ ತಂಡ ಸ್ವಿಫ್ಟ್ ಕಾರು ಹಾಗೂ ಪಿಕಪ್ ವಾಹನದಲ್ಲಿ ಹಿಂಬಾಲಿಸಿತ್ತು.
ಬಜಪೆ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ರಾತ್ರಿ 8.27ಕ್ಕೆ ಕಾರನ್ನು ಏಕಾಏಕಿ ಅಡ್ಡಗಟ್ಟಿ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಕೊನೆಯುಸಿರೆಳೆದಿದ್ದ ಎಂದು ವರದಿಗಳು ತಿಳಿಸಿವೆ.
ಇನ್ನು ಘಟನೆಯಲ್ಲಿ ಸುಹಾಸ್ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದು, ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW