ತುಮಕೂರು: ಜಿಲ್ಲೆಯಲ್ಲಿ 2024ರ ಜನವರಿಯಿಂದ ಈವರೆಗೆ 141 ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 176 ಸಂತ್ರಸ್ತರಿಗೆ 1,19,13,500 ರೂ.ಗಳ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕಳೆದ ಕ್ಯಾಲೆಂಡರ್ ವರ್ಷದ ಜನವರಿ ಮಾಹೆಯಿಂದ 2025ರ ಮಾರ್ಚ್ 27ರವರೆಗೆ ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 112 ಪ್ರಕರಣಗಳಲ್ಲಿ 140 ನೊಂದ ಪರಿಶಿಷ್ಟ ಜಾತಿಯ ಸಂತ್ರಸ್ತರಿಗೆ 97,38,500 ರೂ. ಹಾಗೂ 29 ಪ್ರಕರಣಗಳಲ್ಲಿ 36 ಪರಿಶಿಷ್ಟ ವರ್ಗದ ಸಂತ್ರಸ್ತರಿಗೆ 21,75,000 ರೂ.ಗಳ ಪರಿಹಾರವನ್ನು ಮಂಜೂರು ಮಾಡಲಾಗಿದೆ ಎಂದು ಸಭೆಯಲ್ಲಿ ಹಾಜರಿದ್ದ ದಲಿತ ಮುಖಂಡರ ಗಮನಕ್ಕೆ ತಂದರು.
ಜಿಲ್ಲೆಯಲ್ಲಿ ಕಳೆದ ವರ್ಷದಿಂದ ಈವರೆಗೂ 300ಕ್ಕೂ ಹೆಚ್ಚು ದಲಿತ ದೌರ್ಜನ್ಯ ಪ್ರಕರಣಗಳು ವರದಿಯಾಗಿರುವುದಲ್ಲದೆ, ದಿನೇ ದಿನೇ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ದಲಿತರ ದೌರ್ಜನ್ಯ ಪ್ರಕರಣಗಳು ವರದಿಯಾದಾಗ ಪೊಲೀಸ್ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸಲು ಸೂಚನೆ:
ಜಿಲ್ಲೆಯ ಪಾವಗಡ ತಾಲ್ಲೂಕು ನಾಗಲಮಡಿಕೆ ಹೋಬಳಿಯಲ್ಲಿರುವ ಸೋಲಾರ್ ಕಂಪನಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವವರಿಗೆ ಸರ್ಕಾರಿ ನಿಗಧಿಪಡಿಸಿರುವ ವೇತನವನ್ನು ನೀಡುತ್ತಿಲ್ಲವೆಂದು ದಲಿತ ಸಮುದಾಯದ ಮುಖಂಡರು ಸಭೆಯಲ್ಲಿ ಒತ್ತಾಯಿಸಿದಾಗ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿಗಳು, ಸರ್ಕಾರ ನಿಗದಿಪಡಿಸಿದಂತೆ ಕಾರ್ಮಿಕ ಇಲಾಖೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವವರಿಗೆ ನಿಯಮಾನುಸಾರ ಕನಿಷ್ಠ ವೇತನವನ್ನು ನಿಗಧಿಪಡಿಸಿ ಪಾವತಿ ಮಾಡಬೇಕೆಂದು ಕಾರ್ಮಿಕ ಅಧಿಕಾರಿ ತೇಜಾವತಿ ಅವರಿಗೆ ಸೂಚನೆ ನೀಡಿದರು.
ಇದೇ ರೀತಿ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೂ ಸರಿಸಮನಾದ ವೇತನವನ್ನು ನೀಡಬೇಕೆಂದು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ಮಶನಕ್ಕಾಗಿ ನಿಗದಿಪಡಿಸಿರುವ ಜಾಗಗಳನ್ನು 15 ದಿನಗಳೊಳಗಾಗಿ ಸ್ವಚ್ಛಗೊಳಿಸಿ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಂಜೀವಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಉಪ ವಿಭಾಗಾಧಿಕಾರಿಗಳಾದ ಗೌರವ್ ಕುಮಾರ್ ಹಾಗೂ ಗೋಟೂರು ಶಿವಪ್ಪ, ಆಹಾರ ಮತ್ತು ನಾಗರೀಕ ಜಂಟಿ ನಿರ್ದೇಶಕ ಮಂಟೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಗೂ ದಲಿತ ಸಮುದಾಯದ ಮುಖಂಡರು, ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿಯ ಸದಸ್ಯರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4