ಕೊರಟಗೆರೆ: ಸರ್ಕಾರಿ ಶಾಲೆಗಳು ಮಕ್ಕಳ ಭವಿಷ್ಯ ರೂಪಿಸುವ ಪ್ರಮುಖ ಕೇಂದ್ರಗಳಾಗಿದ್ದು, ಅವುಗಳ ಅಭಿವೃದ್ಧಿಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಮಾಜ ಸೇವಕ ಸದಾನಂದ ಕರೆ ನೀಡಿದರು.
ಕೊರಟಗೆರೆ ಪಟ್ಟಣದ ಗಿರಿನಗರ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸರ್ಕಾರಿ ಶಾಲೆಯಲ್ಲಿ ಗುರುವಾರ ಮಕ್ಕಳಿಗೆ ಸುಮಾರು ₹35 ಸಾವಿರ ವೆಚ್ಚದಲ್ಲಿ ಟ್ರ್ಯಾಕ್ಸೂಟ್ ಸಮವಸ್ತ್ರ ವಿತರಿಸಲಾಯಿತು. ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಮಾಜ ಸೇವಕ ಸದಾನಂದ ಮಾತನಾಡಿ, ಸರ್ಕಾರಿ ಶಾಲೆಯ ಶಿಕ್ಷಣವು ಮಕ್ಕಳಿಗೆ ಉತ್ತಮ ಭವಿಷ್ಯ ಕಟ್ಟಿಕೊಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದರು.
ಸರ್ಕಾರಿ ಶಾಲೆಗಳು ಹಲವು ಕಾರಣಗಳಿಂದ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದು ವಿಷಾದನೀಯ. ಶಾಲೆಯ ಮೂಲ ಸೌಕರ್ಯ ಹಾಗೂ ಮಕ್ಕಳ ಶೈಕ್ಷಣಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಶಾಲೆಯ ಅಭಿವೃದ್ಧಿಗೆ ₹1 ಲಕ್ಷ ಸಹಾಯಧನ ನೀಡುವುದಾಗಿ ಸದಾನಂದ ಘೋಷಿಸಿದರು. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಸ್ವೆಟರ್ಗಳನ್ನು ಸಹ ನೀಡುವುದಾಗಿ ಭರವಸೆ ನೀಡಿದರು.
ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ನಯಾಜ್ ಅಹಮದ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪಿಎಂಶ್ರೀ ಶಾಲೆಗಳ ಅಭಿವೃದ್ಧಿಗೆ ಇನ್ನಷ್ಟು ಆದ್ಯತೆ ನೀಡಬೇಕು. ಕೂಲಿ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಗೆ ಸುಸಜ್ಜಿತ ಕ್ರೀಡಾಂಗಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
ಸಮಾಜ ಸೇವಕ ಸದಾನಂದ ಅವರ ನೇತೃತ್ವದಲ್ಲಿ ಈಗಾಗಲೇ ಹಲವು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲಾಗಿದ್ದು, ಗಿರಿನಗರ ಶಾಲೆಯ ಮಕ್ಕಳಿಗೆ ಟ್ರ್ಯಾಕ್ ಸೂಟ್ ವಿತರಿಸುವ ಮೂಲಕ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಲಾಗಿದೆ ಎಂದರು.
ಶಾಲೆಯ ಮುಖ್ಯ ಶಿಕ್ಷಕ ಶಿವಶಂಕರಯ್ಯ ಮಾತನಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಶಾಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಮಕ್ಕಳಿಗೆ ಉತ್ತಮ ಕ್ರೀಡಾಂಗಣದ ಅಗತ್ಯವಿದ್ದು, ಸರ್ಕಾರದಿಂದ ನಿರೀಕ್ಷಿತ ಅನುದಾನ ದೊರೆಯದ ಹಿನ್ನೆಲೆಯಲ್ಲಿ ವೈಯಕ್ತಿಕ ಹಣ ಹಾಗೂ ದಾನಿಗಳ ಸಹಕಾರದಿಂದ ಶಾಲೆಯ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳ ಉಳಿವು, ಅಭಿವೃದ್ಧಿ ಮತ್ತು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ದಾನಿಗಳು ಹಾಗೂ ಉದ್ಯಮಿಗಳು ಸಹಕಾರ ನೀಡಬೇಕು ಎಂಬ ಸಂದೇಶ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
