ಸರಗೂರು: ತಾಲೂಕಿನ ಪ್ರಸಿದ್ಧ ಬೇಲದಕುಪ್ಪೆ ಶ್ರೀ ಮಹದೇಶ್ವರ ದೇವಸ್ಥಾನಕ್ಕೆ ಆಷಾಢ ಅಮಾವಾಸ್ಯೆ ವಿಶೇಷ ಪೂಜೆಗಾಗಿ ಆಗಮಿಸಿದ್ದ ಸಾವಿರಾರು ಭಕ್ತರು ಬಸ್ ವ್ಯವಸ್ಥೆ ಇಲ್ಲದೆ ತೀವ್ರ ತೊಂದರೆ ಅನುಭವಿಸಿದ ಘಟನೆ ನಡೆದಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಕೊರತೆಯಿಂದಾಗಿ ವೃದ್ಧರು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಅಸಂಖ್ಯಾತ ಭಕ್ತರು ಕಾಡಿನ ಮಧ್ಯದ ರಸ್ತೆಯಲ್ಲಿ ಹಲವು ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲೇ ದೇವಸ್ಥಾನದತ್ತ ತೆರಳಬೇಕಾದ ಪರಿಸ್ಥಿತಿ ಎದುರಾಯಿತು.
ತಾಲೂಕಿನ ಬೇಲದಕುಪ್ಪೆ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಅಂಗವಾಗಿ ಮಂಗಳವಾರದಂದು ವಿಶೇಷ ಪೂಜೆ, ಅಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಮುಂಜಾನೆಯಿಂದಲೇ ದೇವರ ದರ್ಶನ ಪಡೆಯಲು ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಪ್ರವೇಶಕ್ಕೆ ನಿರ್ಬಂಧ ಹೇರಿದ್ದರಿಂದ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ದೇವರ ದರ್ಶನಕ್ಕೆ ಅವಕಾಶ ನೀಡದೆ ತಡೆದ ಕ್ರಮವನ್ನು ಖಂಡಿಸಿದ ಭಕ್ತರು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಕ್ಷಣವೇ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.
ಪ್ರತಿ ವರ್ಷ ಆಷಾಢ ಅಮಾವಾಸ್ಯೆಯ ಸಂದರ್ಭದಲ್ಲಿ ಶ್ರೀ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ. ಇಂತಹ ವಿಶೇಷ ದಿನಗಳಲ್ಲಿ ಸಾರಿಗೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದರು. ಮುಂದಿನ ದಿನಗಳಲ್ಲಾದರೂ ಅರಣ್ಯ ಇಲಾಖೆ, ಸಾರಿಗೆ ಇಲಾಖೆ ಮತ್ತು ಜಿಲ್ಲಾಡಳಿತ ಸಮನ್ವಯದೊಂದಿಗೆ ಸುಗಮ ದರ್ಶನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.
ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಚನ್ನಗುಂಡಿ ಗ್ರಾಮದ ಗ್ರಾಮಸ್ಥರು ಅನ್ನದಾನದ ವ್ಯವಸ್ಥೆ ಮಾಡುವ ಮೂಲಕ ಸೇವೆ ಸಲ್ಲಿಸಿದರು. ಕಾಲ್ನಡಿಗೆಯಿಂದ ಸುಸ್ತಾಗಿದ್ದ ಭಕ್ತರಿಗೆ ಅನ್ನಪ್ರಸಾದ ವಿತರಿಸಿದ ಗ್ರಾಮಸ್ಥರ ಸೇವಾ ಮನೋಭಾವವನ್ನು ಸಾರ್ವಜನಿಕರು ಮುಕ್ತಕಂಠದಿಂದ ಶ್ಲಾಘಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


