ಸರಗೂರು: ತಾಲೂಕು ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ. ಗಿರೀಶ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಮೈಸೂರಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿಂದೆ 2016 ರಿಂದ 2019 ರವರೆಗೆ ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷದ ತಾಲೂಕು ಅಧ್ಯಕ್ಷರಾಗಿ ಗಿರೀಶ್ ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಈ ಹಿನ್ನೆಲೆಯಲ್ಲಿ, ದಶಕಗಳಿಂದ ಪಕ್ಷಕ್ಕಾಗಿ ಶ್ರಮಿಸುತ್ತಿರುವ ಅವರ ಸೇವೆಯನ್ನು ಪರಿಗಣಿಸಿ, ಎರಡನೇ ಬಾರಿಗೆ ಸರಗೂರು ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಗ್ರಾಮಾಂತರ ಜಿಲ್ಲಾಧ್ಯಕ್ಷ ಎನ್.ಕೆ. ಸುಬ್ಬಣ್ಣ ತಿಳಿಸಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಚಾಮಲಾಪುರ ಸಿ.ಕೆ. ಗಿರೀಶ್, “ಪಕ್ಷವನ್ನು ಗ್ರಾಮ ಮಟ್ಟದಿಂದ ಸಂಘಟನೆ ಮಾಡಲು ಜಿಲ್ಲೆಯಾದ್ಯಂತ ಇರುವ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ, ವಿವಿಧ ಹಂತಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎಂದರು.
ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಘಟಕಗಳು ನೀಡುವ ಸಂಘಟನಾತ್ಮಕ ಚಟುವಟಿಕೆಗಳು, ಜನಪರ ಹೋರಾಟಗಳು ಮತ್ತು ಕಾರ್ಯಕ್ರಮಗಳಿಗೆ ಪೂರಕವಾಗಿ ಅಮೂಲ್ಯ ಸಮಯವನ್ನು ನೀಡುವ ಮೂಲಕ ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಅವರು ಭರವಸೆ ನೀಡಿದರು.
ಇದೇ ವೇಳೆ, ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅಧಿಕಾರ ಹಿಡಿಯುವುದೇ ನಮ್ಮ ಮುಂದಿನ ಗುರಿ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


