ಸರಗೂರು: ಶಿಕ್ಷಣವೇ ಮಕ್ಕಳ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದ್ದು, ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ನಾಗರಿಕರಾಗಿ ಬೆಳೆಯಬೇಕು ಎಂದು ನಿವೃತ್ತಿ ನೌಕರರ ಸಂಘದ ಅಧ್ಯಕ್ಷ ಶಂಭುಮೂರ್ತಿ ಹೇಳಿದರು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಸೋಮವಾರ ನಿವೃತ್ತಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿನಿಯರಿಗೆ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಣವು ಮಕ್ಕಳ ಜೀವನದ ಭದ್ರ ಬುನಾದಿಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಶಿಸ್ತು, ಪರಿಶ್ರಮ ಹಾಗೂ ಉತ್ತಮ ಸಂಸ್ಕಾರದೊಂದಿಗೆ ವಿದ್ಯಾಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಎಸ್ ಡಿಎಂಸಿ ಅಧ್ಯಕ್ಷ ಎಸ್.ಡಿ. ಸಣ್ಣಸ್ವಾಮಿ ಮಾತನಾಡಿ, ಇಂತಹ ಸಮಾಜಮುಖಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹೆಚ್ಚಿಸುತ್ತವೆ. ಸರಗೂರಿನಲ್ಲಿ ಕೆಪಿಎಸ್ ಶಾಲೆ ಆರಂಭಿಸಲು ಪ್ರಸ್ತಾವನೆ ನಡೆಯುತ್ತಿದ್ದು, ಬೇರೆಡೆ ಆರಂಭಿಸುವ ಬದಲು ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿಯೇ ಕೆಪಿಎಸ್ ಶಾಲೆ ಆರಂಭಿಸಿದರೆ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಕುರಿತು ಸಂಸದರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ನಿವೃತ್ತಿ ನೌಕರರ ಸಂಘದ ಉಪಾಧ್ಯಕ್ಷ ರಾಮಲಿಂಗಪ್ಪ ಮಾತನಾಡಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಪ್ರತಿವರ್ಷ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಶಿಕ್ಷಣದ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದರು.
ಶಾಲೆಯ ಮುಖ್ಯಶಿಕ್ಷಕ ಎಚ್.ಎನ್. ನಿಂಗರಾಜು ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವಾಗುವಂತಹ ಕಾರ್ಯಕ್ರಮ ಹಮ್ಮಿಕೊಂಡ ನಿವೃತ್ತಿ ನೌಕರರ ಸಂಘದ ಕಾರ್ಯವನ್ನು ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು.
ಬಳಿಕ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೋಟ್ ಬುಕ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆಯ ಇಸಿಒ ನಂಜರಾಜು ಬಿ.ಎಂ., ನಿವೃತ್ತಿ ನೌಕರರ ಸಂಘದ ಪದಾಧಿಕಾರಿಗಳಾದ ವಿಶ್ವೇಂದ್ರ, ಲಿಂಗಚಾರ್, ರಾಮಲಿಂಗಪ್ಪ, ಮಹದೇವಪ್ಪ, ಎಸ್‌ಡಿಎಂಸಿ ಉಪಾಧ್ಯಕ್ಷ ಎಂ. ಶಿವರುದ್ರ, ಶಿಕ್ಷಕರಾದ ಸವಿತಾ, ಕಲ್ಪನಾ ಎಸ್., ಶ್ವೇತಾ, ಪುಷ್ಪ, ರಾಜಮ್ಮ, ಪ್ರತಾಪ್, ಐಶ್ವರ್ಯ, ಆಶಾ, ಶಿಕ್ಷಕ ವೃಂದ, ವಿದ್ಯಾರ್ಥಿನಿಯರು ಹಾಗೂ ಪೋಷಕರು ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


