ಸರಗೂರು: ಮಾಜಿ ಸಮಾಜ ಕಲ್ಯಾಣ ಸಚಿವ ಎಸ್.ಸಿ. ಮಹದೇವಪ್ಪ ಅವರನ್ನು ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವ ಕ್ರಮವನ್ನು ಖಂಡಿಸಿ ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷ ಪಿ. ಚಿನ್ನಣ್ಣ ಹಳಿಯೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಹಾಗೂ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಶೋಷಿತ ಮತ್ತು ದುರ್ಬಲ ವರ್ಗಗಳ ಪರವಾಗಿ ನಿರಂತರ ಸೇವೆ ಸಲ್ಲಿಸಿರುವ ಹಿರಿಯ ನಾಯಕರನ್ನು ಸಚಿವ ಸಂಪುಟದಿಂದ ಹೊರಗಿಟ್ಟಿರುವುದು ಸರಿಯಾದ ನಿರ್ಧಾರವಲ್ಲ ಎಂದು ಹೇಳಿದರು.
ಬಲಗೈ ಸಮುದಾಯದ ಪ್ರಮುಖ ನಾಯಕರನ್ನು ಕಡೆಗಣಿಸಿರುವುದು ತೀವ್ರ ಖಂಡನೀಯ. ರಾಜ್ಯ ಸರ್ಕಾರ ತಕ್ಷಣವೇ ಈ ನಿರ್ಧಾರವನ್ನು ಮರುಪರಿಶೀಲಿಸಿ, ಎಸ್.ಸಿ. ಮಹದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು. ತಪ್ಪಿದ್ದಲ್ಲಿ ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ಮಾತನಾಡಿದ ಮತ್ತೊಬ್ಬ ಮುಖಂಡರು, ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ ಒಂದು ಸ್ಥಾನ ಖಾಲಿಯಿದ್ದು, ಆ ಸ್ಥಾನವನ್ನು ಎಸ್.ಸಿ. ಮಹದೇವಪ್ಪ ಅವರಿಗೆ ನೀಡುವ ಮೂಲಕ ಗೌರವಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಮಿಷನ್ ಉಪಾಧ್ಯಕ್ಷ ಲಂಕೆ ಶ್ರೀನಿವಾಸ, ಪದಾಧಿಕಾರಿಗಳಾದ ಮಸಹಳ್ಳಿ ಸೂರ್ಯ ಕುಮಾರ್, ಶಿವರಾಜು, ಮಹೇಶ್, ಮಹದೇವ ಹಾಗೂ ಚಲುವರಾಜು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
