ಬೆಂಗಳೂರು: ತುಮಕೂರು ನಗರದ ರಸ್ತೆ ಅವ್ಯವಸ್ಥೆ ಸರಿಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ ಎಂದು ವರದಿಯಾಗಿದೆ.
ತುಮಕೂರು ನಗರದ ರಸ್ತೆಗಳು ಅವ್ಯವಸ್ಥೆಯಿಂದ ಕೂಡಿದ್ದು, ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿವೆ ಈ ಹಿನ್ನೆಲೆಯಲ್ಲಿ ವಕೀಲ ಎಲ್. ರಮೇಶ್ ನಾಯಕ್ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳು ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ಸ್ಮಾರ್ಟ್ ಸಿಟಿ ಯೋಜನೆ ಅಡಿ ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ, ನಗರದ ರಸ್ತೆಗಳ ಸ್ಥಿತಿ ಮಾತ್ರ ಬದಲಾಗಿಲ್ಲ. ಇವುಗಳನ್ನು ಮುಚ್ಚುವಂತೆ ಕೋರಿ ಕಳೆದ ಮೂರು ವರ್ಷಗಳಿಂದ ಹಲವು ಬಾರಿ ಮನವಿ ಸಲ್ಲಿಸಿದ್ದರೂ ತುಮಕೂರು ನಗರಸಭೆ ಅಧಿಕಾರಿಗಳು ಪರಿಗಣಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.
ವಾಹನ ಸವಾರರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೋರಿ ಸಲ್ಲಿಸಿದ್ದ ಮನವಿ ಮೇರೆಗೆ ತುಮಕೂರು ನಗರ ಪೊಲೀಸರೇ ಕೆಲ ರಸ್ತೆ ಗುಂಡಿಗಳನ್ನು ಮುಚ್ಚಿದ್ದರು. ಅಲ್ಲದೇ, ರಸ್ತೆ ದುರಸ್ತಿ ಮಾಡುವಂತೆ ನಗರಸಭೆಗೆ ಕೋರಿದ್ದರು. ಆದರೂ, ರಸ್ತೆ ಗುಂಡಿಗಳನ್ನು ಮುಚ್ಚುವ ಕುರಿತು ನಗರಸಭೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.
ಪಾಲಿಕೆಯು ನಾಗರಿಕರಿಗೆ ಲಭ್ಯವಿರುವ ಜೀವಿಸುವ ಹಕ್ಕನ್ನು ಉಲ್ಲಂಘಿಸುತ್ತಿದೆ. ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ ಕಾಯ್ದೆ-1976ರ ಕಲಂ 266 ಹಾಗೂ ಕಲಂ 58(19)ರ ಪ್ರಕಾರ ರಸ್ತೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವುದು ನಗರಸಭೆ, ಪಾಲಿಕೆಗಳ ಆದ್ಯ ಕರ್ತವ್ಯ. ಆದ್ದರಿಂದ ರಸ್ತೆ ಗುಂಡಿಗಳನ್ನು ತಕ್ಷಣವೇ ಮುಚ್ಚಲು ಹಾಗೂ ದುರಸ್ತಿ ಮಾಡಲು ಸರ್ಕಾರ ಹಾಗೂ ತುಮಕೂರು ಪಾಲಿಕೆಗೆ ಆದೇಶಿಸಬೇಕು ಎಂದು ಅರ್ಜಿದಾರರು ತಾವು ಸಲ್ಲಿಸಿದ ಅರ್ಜಿಯಲ್ಲಿ ಕೋರಿದ್ದಾರೆ ಎಂದು ವರದಿಯಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700