ಕೊರಟಗೆರೆ: ಗ್ರಾಮೀಣ ಭಾಗದ ಶ್ರಮಜೀವಿಗಳು ಹಾಗೂ ಮಹಿಳೆಯರ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಮುಖ್ಯ ಉದ್ದೇಶದಿಂದ ಆರಂಭಿಸಲಾಗಿರುವ ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನಾ ಸಮಾರಂಭವು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಗುರುವಾರ ವಿಧ್ಯುಕ್ತವಾಗಿ ನೆರವೇರಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಶ್ಯಾಮಣ್ಣ ರೆಡ್ಡಿ, ಗ್ರಾಮೀಣ ಪ್ರದೇಶದ ಮಹಿಳೆಯರು ಇಂದಿಗೂ ಆರ್ಥಿಕವಾಗಿ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ದೊರೆಯದ ಕಾರಣ ಸ್ವ ಉದ್ಯೋಗ ಆರಂಭಿಸಲು ಅನೇಕರಿಗೆ ಸಾಧ್ಯವಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಮಹಿಳೆಯರಿಗೆ ಪರಸ್ಪರ ಭದ್ರತೆಯ ಆಧಾರದ ಮೇಲೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಟ್ರಸ್ಟ್ ರೂಪಿಸಿದೆ. ಕೋಳಿ ಸಾಕಾಣಿಕೆ, ಬೀಡಿ ಕಟ್ಟುವುದು, ಸಣ್ಣ ಅಂಗಡಿ, ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸ್ವ ಉದ್ಯೋಗ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಶ್ರಮಿಕ ವರ್ಗದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗಲಾಗುವುದು ಎಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಮಾತನಾಡಿದ ಸಬ್‌ಇನ್‌ಸ್ಪೆಕ್ಟರ್ ತೀರ್ಥೇಶ್, ಶ್ರಮಿಕ ವರ್ಗದ ಜನರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಸಂಘ-ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ಮಾಡಿದರು. ಟ್ರಸ್ಟ್ ಕಾರ್ಯದರ್ಶಿ ಕೆ.ಹೆಚ್. ಆನಂದ್ ಕುಮಾರ್ ಮಾತನಾಡಿ, ಟ್ರಸ್ಟ್ ಅನ್ನು ಸರ್ಕಾರದ ನಿಯಮಾನುಸಾರ ಸಂಪೂರ್ಣ ಪಾರದರ್ಶಕವಾಗಿ ನಿರ್ವಹಿಸಲಾಗುವುದು. ಸಾರ್ವಜನಿಕರಿಂದ ಸಂಗ್ರಹಿಸುವ ಹಣಕ್ಕೆ ಸಮರ್ಪಕ ಲೆಕ್ಕಪತ್ರ ನಿರ್ವಹಿಸಿ, ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ. ಆದಾಯ ತೆರಿಗೆ ಸೇರಿದಂತೆ ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದರು. ಜತೆಗೆ, ಸರ್ಕಾರ ಹಾಗೂ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರಿಂದ ಟ್ರಸ್ಟ್‌ಗೆ ಅನುದಾನ ದೊರಕಿಸಲು ಪ್ರಯತ್ನಿಸಲಾಗುವುದು ಹಾಗೂ ತಾಲ್ಲೂಕಿನ ಕಟ್ಟಡ ಕಾರ್ಮಿಕರು, ಕೂಲಿ ಕಾರ್ಮಿಕರು ಸೇರಿದಂತೆ ಶ್ರಮಜೀವಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಮುಖ ವೇದಿಕೆಯಾಗಿ ಟ್ರಸ್ಟ್ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಮುನಿಯಪ್ಪ, ಉಪಕಾರ್ಯದರ್ಶಿ ನಾಗೇಶ್, ಖಜಾಂಚಿ ತಿಮ್ಮರಾಯ, ನಿರ್ದೇಶಕರಾದ ಭಾಗ್ಯಮ್ಮ, ವೆಂಕಟರಾಜು, ಮಾರುತಿ, ನಾಗರಾಜು, ಶ್ರೀನಿವಾಸ, ಗೋಪಿನಾಥ್ ಹಾಗೂ ಡಿಎಸ್ಎಸ್ ಮುಖಂಡರುಗಳಾದ ನರಸಿಂಹಮೂರ್ತಿ, ಮಲ್ಲೇಶ್, ಅಭಿಲಾಷ್, ದಾದಪೀರ್, ರಂಗನಾಥ್, ವರಮಹಾಲಕ್ಷ್ಮಿ, ಲಾವಣ್ಯ, ಗುರುಮೂರ್ತಿ, ಲಕ್ಷ್ಮಣ್, ಲೋಕೇಶ್, ಸಿದ್ದರಾಜಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
