ತಿಪಟೂರು: ಕೇಂದ್ರ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಸಾಲು ಸಾಲು ಪರೀಕ್ಷಾ ಅಕ್ರಮಗಳು ನಡೆಯುತ್ತಿದ್ದು ‘ನೀಟ್’ (NEET) ಪರೀಕ್ಷೆಯ ಅಕ್ರಮಗಳಿಂದಾಗಿ ದೇಶದ ಸಾವಿರಾರು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ಸಂಪೂರ್ಣವಾಗಿ ಹಾಳಾಗಿದೆ ಎಂದು ತಿಪಟೂರು ಕಾಂಗ್ರೆಸ್ ಮುಖಂಡ ಹಾಗೂ ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ. ಶಶಿಧರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀಟ್ ಪರೀಕ್ಷೆಯ ಅಕ್ರಮವನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕುವ ದುರುದ್ದೇಶದಿಂದ ವಿದ್ಯಾರ್ಥಿಗಳನ್ನು ತೀವ್ರವಾಗಿ ಅವಮಾನಿಸಲಾಗಿದೆ. ಹೋರಾಟದಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೇಲೆಯೂ ಹಲ್ಲೆಗೆ ಯತ್ನಿಸಿರುವುದು ಪ್ರಜಾಪ್ರಭುತ್ವದ ಸ್ಪಷ್ಟ ಕಗ್ಗೊಲೆಯಾಗಿದೆ ಎಂದು ಟೀಕಿಸಿದರು.
“ಈ ಸಾಲು ಸಾಲು ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ನೀಟ್ ಅಕ್ರಮ ಹಾಗೂ ಮಾನಸಿಕ ಒತ್ತಡದಿಂದಾಗಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಈ ಅಕ್ರಮದ ಕುರಿತು ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಿ, ಭವಿಷ್ಯದಲ್ಲಿ ಇಂತಹ ಅಕ್ರಮಗಳು ನಡೆಯದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದರು.
ಜುಲೈ 25ಕ್ಕೆ ಬೃಹತ್ ಧರಣಿ ಸತ್ಯಾಗ್ರಹ
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಸವರಾಜ್ ಮಾತನಾಡಿ, “ವಿದ್ಯಾರ್ಥಿಗಳ ನ್ಯಾಯಯುತ ಹಾಗೂ ಶಾಂತಿಯುತ ಹೋರಾಟದ ಮೇಲೆ ನಡೆದಿರುವ ದೌರ್ಜನ್ಯವು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಪ್ರತಿಯೊಬ್ಬ ಭಾರತೀಯನಿಗೂ ಸಂವಿಧಾನಬದ್ಧವಾಗಿ ಪ್ರತಿಭಟಿಸುವ ಹಕ್ಕಿದೆ. ಅದನ್ನು ಹತ್ತಿಕ್ಕುವ ಪ್ರಯತ್ನವನ್ನು ಖಂಡಿಸಿ, ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಜುಲೈ 25ರ ಶನಿವಾರದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ತಿಪಟೂರು ನಗರದ ಸಿಂಗರಿ ನಂಜಪ್ಪ ಸರ್ಕಲ್ ಬಳಿ ‘ಧರಣಿ ಸತ್ಯಾಗ್ರಹ’ ವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಬಸವಣ್ಣ ಮಾತನಾಡಿ, ಕೇಂದ್ರ ಸರ್ಕಾರವು ತನ್ನ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಹಾಕಲು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಕಿಡಿಕಾರಿದರು. ಶನಿವಾರ ನಡೆಯಲಿರುವ ಈ ಧರಣಿ ಸತ್ಯಾಗ್ರಹದಲ್ಲಿ ತಿಪಟೂರಿನ ಜನಸ್ಪಂದನಾ ಟ್ರಸ್ಟ್, ಕರ್ನಾಟಕ ರಾಜ್ಯ ರೈತ ಸಂಘ, ಪ್ರಾಂತ್ಯ ರೈತ ಸಂಘ, ಸಂವಿಧಾನ ರಕ್ಷಣಾ ಪಡೆ, ಸ್ಥಳೀಯ ಕನ್ನಡ ಪರ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ಸಕ್ರಿಯವಾಗಿ ಭಾಗವಹಿಸಲಿವೆ ಎಂದು ತಿಳಿಸಿದರು.ಈ ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡೆ ರಾಜಮ್ಮ, ರಕ್ಷಣಾ ಪಡೆಯ ಅಧ್ಯಕ್ಷ ಲೋಕೇಶ್, ಮುಖಂಡರಾದ ಸಾಧಿಕ್ ಹಾಗೂ ಅಲ್ಲಾಭಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


