ಸಿರಾ: ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎಸ್ ಐ ಆರ್ ಅರ್ಜಿಗಳನ್ನು ವಿತರಿಸಲಿದ್ದು ಪ್ರತಿಯೊಬ್ಬ ನಾಗರಿಕರೂ ತಮ್ಮ ಸಂವಿಧಾನಬದ್ಧವಾದ ಮತದಾನದ ಹಕ್ಕು ಉಳಿಸಿಕೊಳ್ಳಬೇಕು ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ತಿಳಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಮತದಾರರ ಪಟ್ಟಿ ಪರಿಷ್ಕರಣೆಯ ಎಸ್ ಐಆರ್ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮತ ಪರಿಷ್ಕರಣೆಯ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸದಿದ್ದರೆ, ಮತದಾರರ ಪಟ್ಟಿಯಿಂದ ನಿಮ್ಮ ಹೆಸರು ಡಿಲೀಟ್ ಆಗುವ ಸಾಧ್ಯತೆ ಇರುತ್ತದೆ. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಬೇರೆಡೆಗೆ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆಯೂ ಇರುತ್ತದೆಯಾದ್ದರಿಂದ ಜಾಗೃತರಾಗುವುದು ಅತಿ ಅಗತ್ಯ ಎಂದರು.
ಚುನಾವಣಾ ಆಯೋಗದ ಸೂಚನೆಯಂತೆ ಈ ಎಸ್ ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಯನ್ನು ಸಲ್ಲಿಸುವುದು ಪ್ರತಿಯೊಬ್ಬ ನಾಗರಿಕನಿಗೂ ಅತ್ಯಂತ ಮುಖ್ಯವಾಗಿದೆ. ಒಂದು ವೇಳೆ ನೀವು ಅರ್ಜಿ ಸಲ್ಲಿಸದಿದ್ದಲ್ಲಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಉಳಿಯದಿರುವ ಸಾಧ್ಯತೆ ಇರುವುದರಿಂದ, ಇದು ನಿಮ್ಮ ಮತದಾನದ ಹಕ್ಕಿನ ಮೇಲೂ ಗಂಭೀರ ಪರಿಣಾಮ ಬೀರಬಹುದು ಎಂದರು.
ಎಸ್ ಐ ಆರ್ ಪ್ರಕ್ರಿಯೆಯು ಸಂಪೂರ್ಣವಾಗಿ ಮುಗಿಯುವವರೆಗೂ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಜಾಗೃತರಾಗಿ ಮತದಾರರ ಹೆಸರು ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳಬೇಕು. ಜಿಪಂ ಹಾಗೂ ಗ್ರಾಪಂ ಚುನಾವಣೆಗಳು ಒಂದೆರಡು ತಿಂಗಳಲ್ಲಿಯೇ ಸಮೀಪಿಸಲಿದ್ದು ರಾಜಕೀಯ ಪಕ್ಷಗಳ ಉಳಿವು ಅನಿವಾರ್ಯವಾದ ಹಿನ್ನೆಲೆಯಲ್ಲಿ ಪಕ್ಷಗಳ ಮುಖಂಡರು ಮತದಾರರ ಹೆಸರನ್ನು ಪಟ್ಟಿಯಿಂದ ಉಳಿಸಿಕೊಳ್ಳುವ ಸಲುವಾಗಿ ಅಗತ್ಯವಾದ ದಾಖಲೆಗಳನ್ನು ಮತದಾರರಿಂದ ಬಿಎಲ್ಒಗಳಿಗೆ ಸಲ್ಲಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಯಚಂದ್ರ ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್. ಮಂಜುನಾಥ್, ಗ್ರಾ. ಅಧ್ಯಕ್ಷ ನಟರಾಜ್ ಬರಗೂರು, ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೇರೆ ಮಹೇಶ್ ಸೇರಿದಂತೆ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


