ಪರಿಶಿಷ್ಟರ ಅಭಿವೃದ್ಧಿಗಾಗಿ ಮೀಸಲಿರಿಸಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸುತ್ತಿರುವ ರಾಜ್ಯ ಸರ್ಕಾರ, ಎಸ್. ಸಿ ಹಾಗೂ ಎಸ್. ಟಿ ಸಮುದಾಯದವರಿಗೆ ದ್ರೋಹವೆಸಗುತ್ತಿದೆ’ ಎಂದು ಆರೋಪಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು, ‘ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’ ಎಂಬ ಬರಹವುಳ್ಳ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳಿಗೆ ನೀಡಿರುವ ಪರಿಶಿಷ್ಟರ ಹಣವನ್ನು ವಾಪಸು ಪಡೆಯಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು. ‘ಜನರಿಗೆ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ದಲಿತರ ಜೀವನದ ಜೊತೆ ಆಟವಾಡುತ್ತಿದೆ. ದಲಿತರ ಮನೆಗಳಿಗೆ ಹೋಗಿ ಗ್ಯಾರಂಟಿ ಕಾರ್ಡ್ ನೀಡಿದ್ದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು, ಇದೀಗ ದಲಿತರ ಹಣವನ್ನೇ ಗ್ಯಾರಂಟಿಗೆ ವ್ಯಯಿಸುತ್ತಿದ್ದಾರೆ’ ಎಂದು ದೂರಿದರು.
ಕಾಂಗ್ರೆಸ್ ಸರ್ಕಾರ, ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯವನ್ನು ದಿವಾಳಿಯತ್ತ ತೆಗೆದುಕೊಂಡು ಹೋಗುತ್ತಿದೆ. ಎಸ್ ಸಿ ಪಿ ಹಾಗೂ ಟಿ ಎಸ್ ಪಿ ಹಣವನ್ನು ಬೇರೆ ಯೋಜನೆಗಳಿಗೆ ಮೀಸಲಿಡುವುದು ಸರಿಯಲ್ಲ. ಇದರಿಂದಾಗಿ ದಲಿತರು, ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ’ ಎಂದು ಆರೋಪಿಸಿದರು. ‘ಎಸ್‌ಸಿಪಿ ಹಾಗೂ ಟಿಎಸ್ ಕಾಯ್ದೆಯಲ್ಲಿ 7ಡಿ ಕಲಂ ಮೂಲಕ, ಪರಿಶಿಷ್ಟರ ಹಣವನ್ನು ರಾಜ್ಯ ಸರ್ಕಾರದ ಬೇರೆ ಕೆಲಸಗಳಿಗೆ ಬಳಸುತ್ತಿದೆ. ಹೀಗಾಗಿ, 7ಡಿ ಕಲಂ ರದ್ದುಪಡಿಸಬೇಕು’ ಎಂದು ಬೊಮ್ಮಾಯಿ ಆಗ್ರಹಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


