ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಬಹುನಿರೀಕ್ಷಿತ ‘ಕೆಡಿ–ದ ಡೆವಿಲ್’ (K.D The Devil) ಸಿನಿಮಾದ ‘ಸರ್ಸೆ ಸರ್ಸೆ ಸೆರಗ ಸರ್ಸೆ’ ಹಾಡಿನ ವಿವಾದ ಈಗ ತಾರಕಕ್ಕೇರಿದೆ. ಈ ಹಾಡಿನಲ್ಲಿರುವ ಸಾಹಿತ್ಯ ಅಶ್ಲೀಲವಾಗಿದೆ ಮತ್ತು ಮಹಿಳೆಯರ ಘನತೆಗೆ ಧಕ್ಕೆ ತರುವಂತಿದೆ ಎಂಬ ಆಕ್ಷೇಪ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಮಹಿಳಾ ಆಯೋಗವು ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲ ಅವರಿಗೆ ಪತ್ರ ಬರೆದಿದೆ.
ಹಾಡಿನ ಸಾಹಿತ್ಯವು ಅಸಭ್ಯತೆಯಿಂದ ಕೂಡಿದೆ ಎಂದು ಮಹಿಳಾ ಆಯೋಗವು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ಮಂಡಳಿಗೆ ಸೂಚಿಸಿದೆ.
ಈ ಹಾಡಿನ ವಿರುದ್ಧ ಈಗಾಗಲೇ ಮುಂಬೈನಲ್ಲಿ ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ಎಂಬುವವರು ದೂರು ದಾಖಲಿಸಿದ್ದಾರೆ. ನಟಿ ನೋರಾ ಫತೇಹಿ, ಸಂಜಯ್ ದತ್, ನಿರ್ದೇಶಕ ಜೋಗಿ ಪ್ರೇಮ್ ಹಾಗೂ ಗೀತರಚನೆಕಾರ ರಕೀಬ್ ಆಲಂ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.
ಅಶ್ಲೀಲತೆ ಹರಡುತ್ತಿರುವ ಆರೋಪದ ಮೇಲೆ ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 294 ಮತ್ತು ಐಟಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವೂ ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದೆ.
ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ, ಕೆವಿಎನ್ ಪ್ರೊಡಕ್ಷನ್ ತನ್ನ ಯೂಟ್ಯೂಬ್ ಚಾನೆಲ್ನಿಂದ ಹಿಂದಿ ಆವೃತ್ತಿಯ ಹಾಡನ್ನು ತೆಗೆದುಹಾಕಿದೆ.
ಕನ್ನಡ ಮತ್ತು ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಈ ಹಾಡು ಈಗ ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಹಾಡಿನ ಸಾಹಿತ್ಯದ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


