ತುಮಕೂರು: ವೈದ್ಯರು ಸರಿಯಾದ ಸಮಯಕ್ಕೆ ರೋಗಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಚಿಕಿತ್ಸೆ ನೀಡಿದರೆ ಜನ ಮಾನಸದಲ್ಲಿ ಸದಾ ಕಾಲ ಉಳಿಯುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ವೈದ್ಯಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಹಾಗೂ ಸಿಬ್ಬಂದಿ ಪ್ರತಿದಿನ ತಪ್ಪದೇ ಕರ್ತವ್ಯಕ್ಕೆ ಹಾಜರಾಗಿ ರೋಗಿಗಳಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಬೇಕು ಎಂದರು.
ವೈದ್ಯಾಧಿಕಾರಿಗಳು ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮಾಡಬೇಕು. ಬಡವರಿಗೆ ಉತ್ತಮ ಸೇವೆಯನ್ನು ನೀಡಬೇಕು. ಆಯುಷ್ಮಾನ್ ಆರೋಗ್ಯ ಮಂದಿರ ಗ್ರೇಡ್ ಸಿಸ್ಟಮ್ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ತುಮಕೂರು ಜಿಲ್ಲೆ ಮೊದಲ ಸ್ಥಾನದಲ್ಲಿರಬೇಕು. ವೈದ್ಯಾಧಿಕಾರಿಗಳು ತಮ್ಮ ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಉಪ ಕಾರ್ಯದರ್ಶಿ (ಆಡಳಿತ), ಜಿಲ್ಲಾ ವೈದ್ಯಾಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx