ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು 59 ವರ್ಷದ ಚಂದ್ರಯ್ಯ ಎಂದು ಗುರುತಿಸಲಾಗಿದ್ದು, ಈತ ನಿವೃತ್ತಿಯ ಅಂಚಿನಲ್ಲಿದ್ದ ಎಂದು ತಿಳಿದುಬಂದಿದೆ. ಆರೋಪಿಗೆ ಸದ್ಯ ಶನಿವಾರದಂದು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಬಾಲಕಿಯು ಸದ್ಯ ಒಂದೂವರೆ ತಿಂಗಳ ಗರ್ಭಿಣಿಯಾಗಿದ್ದು, ಆಕೆಗೆ ಮುಖ್ಯೋಪಾಧ್ಯಾಯನಿಂದಲೇ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಶ್ರೀರಾಂಪುರ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ — POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ. ಮುಖ್ಯೋಪಾಧ್ಯಾಯ ಚಂದ್ರಯ್ಯ ಕಳೆದ ಸುಮಾರು ಒಂದು ವರ್ಷದಿಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎನ್ನಲಾಗಿದೆ.
“ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ವೈದ್ಯಕೀಯ-ಕಾನೂನು ಕ್ರಮಗಳು (Medical–legal procedures) ಪ್ರಗತಿಯಲ್ಲಿವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮತ್ತೊಂದೆಡೆ, ಬೆಂಗಳೂರು ಉತ್ತರ ಮಕ್ಕಳ ಕಲ್ಯಾಣ ಸಮಿತಿಯ (CWC) ಸದಸ್ಯರು ಬಾಲಕಿಗೆ ತಾತ್ಕಾಲಿಕ ವಸತಿ ಮತ್ತು ರಕ್ಷಣೆ ಒದಗಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉತ್ತರ (ಯಲಹಂಕ) ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಸಮಿತಿ ಸೂಚನೆ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


