ಕಲಬುರಗಿ: 11 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಸಾಬಣ್ಣ ಮಲ್ಕಪ್ಪ ಕಟ್ಟಿಮನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.25 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಕಲಬುರಗಿ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ನಿವಾಸಿಯಾದ ಸಾಬಣ್ಣ, ತನ್ನದೇ ಗ್ರಾಮದ 11 ವರ್ಷ 10 ತಿಂಗಳ ಬಾಲಕಿಯನ್ನು ಮನೆಯ ಮುಂದೆ ಆಟವಾಡುತ್ತಿದ್ದಾಗ ಅಪಹರಿಸಿದ್ದನು. ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ ಆಕೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮವೊಂದಕ್ಕೆ ಕರೆದೊಯ್ದಿದ್ದನು.
ಅಕ್ಟೋಬರ್ 16 ರಿಂದ 31ರ ವರೆಗೆ ಬಾಲಕಿಯನ್ನು ಒಂದು ಕೊಠಡಿಯಲ್ಲಿ ಕೂಡಿಹಾಕಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ ಮಾಹಿತಿ ಪಡೆದ ಬಾಲಕಿಯ ತಂದೆ, ಸ್ಥಳಕ್ಕೆ ಧಾವಿಸಿ ಮಗಳನ್ನು ರಕ್ಷಿಸಿ ರಟಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ್ ಅವರು ಮಂಡಿಸಿದ ಸಾಕ್ಷ್ಯಾಧಾರಗಳನ್ನು ಪುರಸ್ಕರಿಸಿ ಆರೋಪಿಯನ್ನು ದೋಷಿ ಎಂದು ಘೋಷಿಸಿದರು.
ಅಪರಾಧದ ಗಂಭೀರತೆಯನ್ನು ಪರಿಗಣಿಸಿ, ದೋಷಿಗೆ 20 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ಹಾಗೂ 1.25 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ 1 ಲಕ್ಷ ರೂಪಾಯಿಯನ್ನು ಸಂತ್ರಸ್ತ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


